ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಾ.21ರಂದು ಬೆಂಗಳೂರು ಚಲೋ: ಬಡಗಲಪುರ ನಾಗೇಂದ್ರ

Update: 2022-03-10 16:32 GMT

ಮೈಸೂರು,ಮಾ.10: ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಮಾ.21 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‍ನಲ್ಲಿ ಬೃಹತ್ ಬೆಂಗಳೂರು ಚಲೋ ಮತ್ತು ಪರ್ಯಾಯ ಜನಾಧಿವೇಶನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಸುಗ್ರಿವಾಜ್ಞೆಗಳ ಮೂಲಕ ಜಾರಿಗೆ ತಂದಿರುವ ಭೂಸುಧಾರಣಾ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವಂತೆ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿ ನಿರಂತರ ಹೋರಾಟ ಮಾಡುತ್ತಿದ್ದು, ರಾಜ್ಯ ಸರ್ಕಾರ ಈ ಕಾಯ್ದೆಗಳನ್ನು ವಾಪಸ್ ಪಡೆಯದೆ ರೈತರ ಬದುಕನ್ನು ನಾಶ ಮಾಡುತ್ತಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರವೇ ಎಂಎಸ್‍ಪಿ ಖಾತ್ರಿ ಮಾಡಲು ಒತ್ತಾಯಿಸಿ ರಾಗಿ, ಜೋಳ ಭತ್ತವನ್ನು ಯಾವುದೇ ಬಾಕಿ ಇಲ್ಲದೆ ಖರೀದಿ ಕೇಂದ್ರಗಳ ಮೂಲಕ ಖರೀದಿಸಬೇಕು ಎಂದು ಒತ್ತಾಯಿಸಲಾಗುವುದು.

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಒಂದು ಭಾಗ ಜನಾಂದೋಲನ ಮಹಾಮೈತ್ರಿ, ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಜನಾಂದೋಲನ ಮಹಾಮೈತ್ರಿ ಯಾತ್ರೆ ಆರಂಭವಾಗಿದ್ದು, ಮಲೈಮಹದೇಶ್ವರ ಬೆಟ್ಟದಲ್ಲಿ ಬುಧವಾರ ಚಾಲನೆ ನೀಡಲಾಗಿದೆ. ಇದು ಸಹ ವಿವಿಧ ನಗರ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸಿ  ಬೆಂಗಳೂರಿನಲ್ಲಿ ಸಮಾವೇಶಗೊಳ್ಳಲಿದೆ ಎಂದು ಹೇಳಿದರು.

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಮಾ.21 ರಂದು ಬೃಹತ್ ಸಮಾವೇಶ ನಡೆಸಲಿದ್ದು, ಮಾ.22 ಮತ್ತು 23 ರಂದು ಪರ್ಯಾಯ ಜನಾಧಿವೇಶನ ನಡೆಸಲಾಗುವುದು ಈ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗಗಳಿಂದ 20 ಸಾವಿರಕ್ಕೂ ಹೆಚ್ಚು ರೈತ,ದಲಿತ, ಕಾರ್ಮಿಕ, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ರವಿಕಿರಣ್ ಪೂಣಜ, ಕಾರ್ಮಿಕ ಮುಖಂಡ ಜಗದೀಶ್ ಸೂರ್ಯ, ಪಿ.ಮರಂಕಯ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News