×
Ad

ಅಗ್ರಿಗೋಲ್ಡ್ ವಂಚನೆ ಪ್ರಕರಣ: ತಪ್ಪು ಮಾಹಿತಿ ನೀಡಿದ್ದ ಉಪ ವಿಭಾಗಾಧಿಕಾರಿ ವಿರುದ್ಧ ಹೈಕೋರ್ಟ್ ಅಸಮಾಧಾನ

Update: 2022-03-11 19:37 IST

ಬೆಂಗಳೂರು, ಮಾ.11:  ಹೂಡಿಕೆದಾರರಿಗೆ ವಂಚನೆ ಎಸಗಿರುವ ಆರೋಪದಲ್ಲಿ ಅಗ್ರಿಗೋಲ್ಡ್ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಬಂಧ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದ ರಾಮನಗರ ಉಪ ವಿಭಾಗಾಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಇಂಥ ತಪ್ಪಿಗೆ ನಿಮ್ಮನ್ನು ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ಅಗ್ರಿಗೋಲ್ಡ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ ಕಲ್ಯಾಣ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕಳೆದ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ಸೂಚನೆಯಂತೆ ರಾಮನಗರ ಉಪ ವಿಭಾಗಾಧಿಕಾರಿ ಸಿ.ಮಂಜುನಾಥ್ ಖುದ್ದು ಹಾಜರಿದ್ದರು. ಸರಕಾರದ ಪರ ವಕೀಲರು, ಸಂವಹನ ಕೊರತೆಯಿಂದಾಗಿ ನ್ಯಾಯಾಲಯಕ್ಕೆ ಸೂಕ್ತ ಮಾಹಿತಿ ಒಗಿಸುವಲ್ಲಿ ಲೋಪವಾಗಿದೆ. ಈ ಬಗ್ಗೆ ವಿವರಣೆ ನೀಡಿ ಮಾ.5ರಂದು ಎಸಿ ಪ್ರಮಾಣ ಪತ್ರ ಸಲ್ಲಿಸಿದ್ದು, ತಮ್ಮ ತಪ್ಪಿಗಾಗಿ ಬೇಷರತ್ ಕ್ಷಮೆಯನ್ನೂ ಯಾಚಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. 

ಆಗ ನ್ಯಾಯಪೀಠ, ಕೋರ್ಟ್‍ಗೆ ತಪ್ಪು ಮಾಹಿತಿ ನೀಡಿ, ನ್ಯಾಯಾಂಗ ನಿಂದನೆ ಎಸಗಿರುವ ಅವರನ್ನು ಜೈಲಿಗೆ ಕಳುಹಿಸುವುದಾಗಿ ನುಡಿಯಿತು. ಅಲ್ಲದೆ, ಅಂತಿಮವಾಗಿ ಉಪ ವಿಭಾಗಾಧಿಕಾರಿಯ ಪ್ರಮಾಣಪತ್ರ ದಾಖಲಿಸಿಕೊಂಡ ಪೀಠ, ಅವರ ವಿರುದ್ಧ ಯಾವುದೇ ಕ್ರಮ ಜರುಗಿಸುತ್ತಿಲ್ಲ. ಆದರೆ, ಎಸಿ ಸಿ.ಮಂಜುನಾಥ್ ಅವರಿಗೆ ನ್ಯಾಯಾಲಯ ಎಚ್ಚರಿಕೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಜಾಗರೂಕರಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News