×
Ad

ಕೊಡಗಿನ ಹುತಾತ್ಮ ಯೋಧ ಅಲ್ತಾಫ್ ಕುಟುಂಬಕ್ಕೆ ಮನೆ ನಿರ್ಮಾಣ: ಸಚಿವ ವಿ.ಸೋಮಣ್ಣ

Update: 2022-03-16 19:31 IST

ಬೆಂಗಳೂರು, ಮಾ.16: ಜಮ್ಮು-ಕಾಶ್ಮೀರದಲ್ಲಿ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿರುವ ಕೊಡಗಿನ ಅಲ್ತಾಫ್ ಅಹ್ಮದ್ ಅವರ ಕುಟುಂಬಕ್ಕೆ ಕೊಡಗು ಜಿಲ್ಲೆಯಲ್ಲಿ ಮನೆ ಕೊಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬುಧವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಫೆ.23ರಂದು ಕಾಶ್ಮೀರದಲ್ಲಿ ಹಿಮಗುಡ್ಡೆಯಲ್ಲಿ ಸಿಲುಕಿ ಹುತಾತ್ಮನಾದ ಅಲ್ತಾಫ್ ಅಹ್ಮದ್ ಅವರ ಕುಟುಂಬಕ್ಕೆ ಮನೆ ನಿರ್ಮಿಸುವುದಾಗಿ ನುಡಿದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಳ ಮಾಡುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುವುದು. ಈಗಾಗಲೇ ಈ ಸಂಬಂಧ ಕೇಂದ್ರ ಸಚಿವರಿಗೂ ಪತ್ರ ಬರೆಯಲಾಗಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಸವ ವಸತಿ ಯೋಜನೆಯಡಿ ಸಾಮಾನ್ಯರು ಮತ್ತು ಅಲ್ಪಸಂಖ್ಯಾತರಿಗೆ 1.20 ಲಕ್ಷ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೆ 1.75 ಲಕ್ಷ, ದೇವರಾಜ ಅರಸು ವಸತಿ ಯೋಜನೆಯಡಿ ಸಾಮಾನ್ಯರು ಮತ್ತು ಅಲ್ಪಸಂಖ್ಯಾತರಿಗೆ 1.20 ಲಕ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 1.75 ಲಕ್ಷ ರೂ. ಸಹಾಯಧನ ನೀಡಲಾಗುತ್ತಿದೆ. ಈ ಹಣದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಕಷ್ಟಸಾಧ್ಯ ಎನ್ನುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News