×
Ad

ಎಲ್‍ಎಸ್‍ಡಿ ಕಾಯಿಲೆ ಚಿಕಿತ್ಸೆಗೆ 3 ಕೋಟಿ ಬಿಡುಗಡೆಗೆ ಹೈಕೋರ್ಟ್ ಆದೇಶ

Update: 2022-03-17 22:55 IST

ಬೆಂಗಳೂರು: ಅಪರೂಪದ ಲೈಸೋಸೋಮಲ್ ಸ್ಟೋರೇಜ್ ಡಿಸಾರ್ಡರ್ (ಎಲ್‍ಎಸ್‍ಡಿ) ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗಾಗಿ ಕೇಂದ್ರ ಸರಕಾರ ಠೇವಣಿ ಇರಿಸಿರುವ 3 ಕೋಟಿ ಹಣವನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತನ್ನ ರಿಜಿಸ್ಟ್ರಾರ್ ಜನರಲ್‍ಗೆ ನಿರ್ದೇಶಿಸಿದೆ.

ಎಲ್‍ಎಸ್‍ಡಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗೆ ನೆರವು ಕಲ್ಪಿಸಲು ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಲೈಸೋಸೋಮಲ್ ಸ್ಟೋರೇಜ್ ಡಿಸಾರ್ಡರ್ಸ್ ಸೊಸೈಟಿ ಆಫ್ ಇಂಡಿಯಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ್ ವಾದ ಮಂಡಿಸಿ, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನಿರ್ದೇಶನದಂತೆ ಎಲ್‍ಎಸ್‍ಡಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗೆ ಮೂರು ಕೋಟಿ ಹಣವನ್ನು ಹೈಕೋರ್ಟ್ ಮೂಲಕ ಬ್ಯಾಂಕ್‍ನಲ್ಲಿ ಠೇವಣಿ ಇಡಲಾಗಿದೆ.

ಅದನ್ನು ಮಕ್ಕಳಿಗೆ ಚಿಕಿತ್ಸೆ ಕಲ್ಪಿಸುತ್ತಿರುವ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಬಿಡುಗಡೆ ಮಾಡುವಂತೆ ಕೋರಿದರು. ಇದೇ ವೇಳೆ ಇಂದಿರಾಗಾಂಧಿ ಸಂಸ್ಥೆಯ ಪರ ವಕೀಲರು ವಾದಿಸಿ, ಹಣ ಬಿಡುಗಡೆಗೆ ಕೋರಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಮುಂದೆ ಸೂಕ್ತ ಅರ್ಜಿ ಸಲ್ಲಿಸಲಾಗುವುದು ಎಂದರು.

ಮನವಿ ಪರಿಗಣಿಸಿದ ಪೀಠ, ಹಣ ಬಿಡುಗಡೆಗಾಗಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‍ಗೆ ಸೂಕ್ತ ಅರ್ಜಿ ಸಲ್ಲಿಸಬಹುದು. ಒಂದೊಮ್ಮೆ ಅರ್ಜಿ ಸಲ್ಲಿಕೆಯಾದರೆ ಅದನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿದ ನಂತರ ಬಡ್ಡಿ ಸಹಿತ ಹಣ ಬಿಡುಗಡೆ ಮಾಡಬೇಕು ಎಂದು ರಿಜಿಸ್ಟ್ರಾರ್ ಜನರಲ್‍ಗೆ ನಿರ್ದೇಶಿಸಿ ಅರ್ಜಿ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News