ಹಾವೇರಿ: ಹುಟ್ಟೂರು ತಲುಪಿದ ನವೀನ್ ಪಾರ್ಥಿವ ಶರೀರ
ಹಾವೇರಿ, ಮಾ.21: ಯುದ್ಧಪೀಡಿತ ಉಕ್ರೇನ್‌ನಲ್ಲಿ ರಶ್ಯ ದಾಳಿಯಿಂದ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಮೃತದೇಹ ಅವರ ಹುಟ್ಟೂರಾದ ಹಾವೇರಿ ಜಿಲ್ಲೆಯ ಚಳಗೇರಿಗೆ ತಲುಪಿದೆ.
ಪೋಷಕರು ಮತ್ತು ಗ್ರಾಮಸ್ಥರು ನವೀನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ ಮೃತದೇಹವನ್ನು ತರಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತದೇಹ ಮತ್ತು ನವೀನ್‌ಗೆ ಸಂಬಂಧಿಸಿದ ದಾಖಲೆಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಬಳಿಕ ಪೊಲೀಸ್ ಭದ್ರತೆಯಲ್ಲಿ ಆ್ಯಂಬುಲೆನ್ಸ್‌ನಲ್ಲಿ ಮೃತದೇಹವನ್ನು ಚಳಗೇರಿ ಗ್ರಾಮಕ್ಕೆ ತರಲಾಯಿತು. ನವೀನ್ ರ ಮೃತದೇಹವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಅದರಂತೆ ಇಂದು ಸಂಜೆಯವರೆಗೆ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಆಸ್ಪತ್ರೆಗೆ ದಾನ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.