ಸಚಿವ ಸುಧಾಕರ್ ರಾಜೀನಾಮೆ ಪಡೆದು, ಆರೋಗ್ಯ ಇಲಾಖೆಯ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ: ಎಎಪಿ ಆಗ್ರಹ

Update: 2022-03-21 16:19 GMT
ಸಚಿವ ಸುಧಾಕರ್

ಬೆಂಗಳೂರು, ಮಾ.21: ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಬಿಜೆಪಿಯ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಅವರು ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಹಾಗೂ ಔಷಧಿ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ 40 ದೂರು ನೀಡಿದ್ದಾರೆ. ಆದರೆ ಇದುವರೆಗೂ ತನಿಖೆ ನಡೆದಿಲ್ಲ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ. 

ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ, ಭಡ್ತಿ ಹಾಗೂ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ. ವೈದ್ಯಕೀಯ ಉಪಕರಣಗಳು ಹಾಗೂ ಔಷಧಿಗಳ ಖರೀದಿ, ನಿರ್ಮಾಣ ಕಾಮಗಾರಿ ಹಾಗೂ ಮೂಲಸೌಕರ್ಯ ಕಲ್ಪಿಸುವುದರಲ್ಲಿ ಭಾರೀ ಪ್ರಮಾಣದ ಅಕ್ರಮವಾಗುತ್ತಿದೆ. ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಪಡೆಯಲು ರೋಗಿಗಳು ಲಂಚ ನೀಡಬೇಕಾಗಿದೆ. ಆರೋಗ್ಯ ಸಚಿವರು ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ನಡೆದರೆ ಆರೋಗ್ಯ ಇಲಾಖೆಯಲ್ಲಿನ ಕೋಟಿಗಟ್ಟಲೆ ಅವ್ಯವಹಾರ ಬಯಲಾಗುತ್ತದೆ. ರಾಜ್ಯಪಾಲರು ಶೀಘ್ರವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಎಎಪಿಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರವಿಶಂಕರ್ ಮಾತನಾಡಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಹಣದ ದಾಹಕ್ಕೆ ಸಾಮಾನ್ಯ ರೋಗಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರಕಾರಿ ಆಸ್ಪತ್ರೆಯಿಂದ ರೋಗಿಯ ಶವವನ್ನು ಹೊರತರಬೇಕಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಂಚ ನೀಡಬೇಕಾಗಿದೆ. ಆರೋಗ್ಯ ಇಲಾಖೆಯ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರುವುದು ಸಾಮಾನ್ಯವಾಗಿದ್ದರೂ, ಯಾರ ವಿರುದ್ಧವೂ ತನಿಖೆ ನಡೆಯುತ್ತಿಲ್ಲ. ಭ್ರಷ್ಟ ಸಚಿವರಿಂದಾಗಿ ಇಲಾಖೆಯ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಾರ್ಟಿ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ರಾಜಶೇಖರ್ ದೊಡ್ಡಣ್ಣ ಹಾಗೂ ಪಕ್ಷದ ಮಹಿಳಾ ಮುಖಂಡರಾದ ಅರ್ಚನಾ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News