ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ: ಬೆಂಗಳೂರು ವಕೀಲರ ಸಂಘ ಖಂಡನೆ
Update: 2022-03-21 22:24 IST
ಬೆಂಗಳೂರು, ಮಾ.21: ಹಿಜಾಬ್ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಒಡ್ಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಬೆಂಗಳೂರು ವಕೀಲರ ಸಂಘ(ಎಎಬಿ) ರಾಜ್ಯ ಸರಕಾರವನ್ನು ಒತ್ತಾಯಿಸಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಮಧುರೈನ ಕೆಲ ವ್ಯಕ್ತಿಗಳು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವುದನ್ನು ಬೆಂಗಳೂರು ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿಯಲು ಸರಕಾರ ಕೂಡಲೇ ಆರೋಪಿಗಳನ್ನು ಬಂಧಿಸಿ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.