ಅಮೀರೆ ಶರೀಅತ್ ಅನ್ನು ಭೇಟಿಯಾದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು, ಮಾ.23: ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ರಶಾದಿ ಅವರನ್ನು ಬುಧವಾರ ಸಂಜೆ ದಾರೂಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು)ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು.
ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿ ಸದಸ್ಯ ಪೀಠ ತೀರ್ಪು ನೀಡಿದೆ. ಆ ಆದೇಶವನ್ನು ಪ್ರಶ್ನಿಸಿ ಈಗಾಗಲೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಮಾ.28ರಿಂದ ಪರೀಕ್ಷೆಗಳು ಆರಂಭವಾಗುತ್ತಿರುವುದರಿಂದ, ಮುಸ್ಲಿಮ್ ಹೆಣ್ಣು ಮಕ್ಕಳಿಗೆ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ ತಲೆ ಮೇಲೆ ದುಪಟ್ಟಾ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಒದಗಿಸುವಂತೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ಎಂದು ಸಿದ್ದರಾಮಯ್ಯಗೆ ಅಮೀರೆ ಶರೀಅತ್ ಕೋರಿದ್ದಾರೆ.
ಅವರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಿದ್ದರಾಮಯ್ಯ, ನಾಳೆಯೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಅಮೀರೆ ಶರೀಅತ್ ಭೇಟಿ ಸಂದರ್ಭದಲ್ಲಿ ಶಾಸಕರಾದ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಎನ್.ಎ.ಹಾರೀಸ್, ನಸೀರ್ ಅಹ್ಮದ್, ರಿಝ್ವಾನ್ ಅರ್ಶದ್, ಕೆ.ಜೆ.ಜಾರ್ಜ್, ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ, ಮೌಲಾನ ಸೈಯ್ಯದ್ ಶಬ್ಬೀರ್ ಅಹ್ಮದ್ ನದ್ವಿ, ಹಝ್ರತ್ ಹಮೀದ್ ಷಾ ಕಾಂಪ್ಲೆಕ್ಸ್ ಆಡಳಿತ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.