ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಚುನಾವಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮಾ.23: ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಒಮ್ಮತದ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ.50 ಅನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. ಶೇ.7.5ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಹಿಂದಿನ ಸರಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್ಸಿ ಮತ್ತು ಎಸ್ಟಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದು ಅವರು ಹೇಳಿದರು.
ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.
2 ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3 ಬಿ ನಲ್ಲಿರುವವರು 2 ಎ ವರ್ಗಕ್ಕೆ ಸೇರಬೇಕು, 3 ಬಿ ನಲ್ಲಿ ಇಲ್ಲದವರು, 3 ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರೆಯಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಮೂಲಭೂತವಾಗಿ ಶೇ.50ರಷ್ಟು ದಾಟಬೇಕೋ, ದಾಟಿದರೆ ಕಾನೂನಿನ ರೀತಿ ಹೇಗೆ ಮಾಡಬೇಕು ಎನ್ನುವ ವಿಚಾರವಿದೆ. ಮೊದಲು ನಾಗಮೋಹನ್ ದಾಸ್ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾμï ಅಡಿಯವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಇಂದಿನ ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.