ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಕೋರಿ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಮಾ.24: ರಾಜ್ಯದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್‍ಗಳನ್ನು ಒದಗಿಸುವಂತೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೋರಿ ಡಾ.ತ್ರಿನೇತ್ರ ಹಲ್ದಾರ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸಾಮಾನ್ಯ ಹಾಸ್ಟೆಲ್‍ಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳು ಶೌಚಾಲಯ ಸೇರಿ ಹಲವು ಸಮಸ್ಯೆ ಎದುರಿಸುತ್ತಾರೆ. ಇದರಿಂದಾಗಿಯೇ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ. ಹೀಗಾಗಿ, ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಒದಗಿಸಿ ಎಂದು ಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂನ್ 6ಕ್ಕೆ ಮುಂದೂಡಿತು.
ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಅಗತ್ಯವಿದೆ. ಸೆ.25, 2020 ರಂದು ಲೈಂಗಿಕ ಅಲ್ಪಸಂಖ್ಯಾತರ ಹಕ್ಕಿನ ರಕ್ಷಣೆ ನಿಯಮಗಳನ್ನು ಅನುಷ್ಠಾನ ಗೊಳಿಸಲಾಗಿದೆ. ತಾತ್ಕಾಲಿಕ ವಸತಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್, ಶೌಚಾಲಯ ಸೇರಿದಂತೆ ಸಾಂಸ್ಥಿಕ ಮೂಲಸೌಕರ್ಯ ಕಲ್ಪಿಸಲು ಸರಕಾರಕೆಕ ಅಧಿಕಾರವಿದೆ. ಆದರೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್, ವಸತಿ ಸೌಲಭ್ಯ ಒದಗಿಸಲು ನಿರ್ದೇಶನ ನೀಡಬೇಕಿದೆ.
ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ಟಾಟಾ ಸಾಮಾಜಿಕ ವಿಜ್ಞಾನ ಸಂಸ್ಥೆಯಲ್ಲೂ ಪ್ರತ್ಯೇಕ ವಸತಿ ವ್ಯವಸ್ಥೆ ಇದೆ. ಸುಪ್ರೀಂ ಕೋರ್ಟ್ ಕೂಡಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಆಯ್ಕೆಯ ಲಿಂಗದ ಆಧಾರದಲ್ಲಿ ಹಾಸ್ಟೆಲ್ ಒದಗಿಸಲು ಸೂಚಿಸಿದೆ. ಹೀಗಾಗಿ ರಾಜ್ಯದಲ್ಲೂ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ಪ್ರವೇಶದ ಅರ್ಜಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶವಿರುವಂತೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸದ್ಯ ರಾಜ್ಯ ಸರಕಾರ, ಉನ್ನತ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಈ ಸಂಬಂಧ ನೋಟಿಸ್ ಜಾರಿಗೆ ಆದೇಶಿಸಿದೆ.