ಎಪ್ರಿಲ್ 5ಕ್ಕೆ ರಾಜ್ಯಕ್ಕೆ ಪ್ರಧಾನಿ ಭೇಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಮಾ. 26: ‘ಪ್ರಧಾನಿ ನರೇಂದ್ರ ಮೋದಿಯವರು ಸರಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಎಪ್ರಿಲ್ 5ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶನಿವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಕ್ಷೀರ ಅಭಿವೃದ್ಧಿ ಬ್ಯಾಂಕ್ ಉದ್ಘಾಟನೆಯಾಗಲಿದ್ದು, ಎ1ರಂದು ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ ಎಂದರು.
‘ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸಲಿದ್ದಾರೆ ಎಂದು ಸಿಎಂ ತಿಳಿಸಿದರು.
‘ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದಿಲ್ಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆಯಾಗಬೇಕು. ಹೈಕಮಾಂಡ್ ಸೂಚನೆ ನೀಡಿ ದಿಲ್ಲಿಗೆ ಆಹ್ವಾನ ನೀಡಿದರೆ ಕೂಡಲೇ ತೆರಳಿ ಆ ಬಗ್ಗೆ ಸಮಾಲೋಚನೆ ನಡೆಸಿ ತೀರ್ಮಾನ ಮಾಡಲಾಗುವುದು'
-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ