ಗಂಗಾ ಕಲ್ಯಾಣ ಟೆಂಡರ್ ಅವ್ಯವಹಾರ ತನಿಖೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2022-03-28 14:45 GMT

ಬೆಂಗಳೂರು, ಮಾ. 28: ‘ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ‘ಗಂಗಾ ಕಲ್ಯಾಣ' ಯೋಜನೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಅವ್ಯವಹಾರ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು' ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಕಟಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಲಾಖೆಯಲ್ಲಿ ಪಾರದರ್ಶಕತೆ ತರಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಟೆಂಡರ್‍ನಲ್ಲಿ ಲೋಪಗಳಿದ್ದರೆ ತನಿಖೆ ನಡೆಸಲಾಗುವುದು ಎಂದರು.

‘2019-20, 2020-21ರಲ್ಲಿ ಗಂಗಾ ಕಲ್ಯಾಣ ಕೊಳವೆ ಬಾವಿ ಕೊರೆಸುವ ಯೋಜನೆಯ ಟೆಂಡರ್‍ನಲ್ಲಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಕೊಳವೆಬಾವಿ ಕೊರೆಸುವ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು' ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಕಟಿಸಿದರು.

‘ಭೋವಿ ಅಭಿವೃದ್ಧಿ ನಿಗಮದಲ್ಲಿನ ಅಧಿಕಾರಿ ವರ್ಗಾವಣೆ, ತಡೆಯಾಜ್ಞೆ ಹಾಗೂ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮೂರು ಮಂದಿಯನ್ನು ಅಸಮಾನತ್ತು ಮಾಡಲಾಗಿದೆ. ಇಲಾಖೆಯಲ್ಲಿ ಯಾವುದೇ ಕಾರಣಕ್ಕೂ ಅಶಿಸ್ತು ಸಹಿಸುವುದಿಲ್ಲ. ಅಲ್ಲದೆ ಇಲಾಖೆ ಸುಧಾರಣೆ ತಂದು ಪಾರದರ್ಶಕತೆ ಕಾಯ್ದುಕೊಳ್ಳಲು ಆಸ್ಥೆ ವಹಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News