×
Ad

ಕಲಿಕೆ ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಕೂಡ ಅಗತ್ಯ: ಡಿಸಿ ಕೂರ್ಮಾರಾವ್

Update: 2022-03-29 17:25 IST

ಉಡುಪಿ : ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಹೊಂದುವುದು ಅತಿ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳ ಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಆಯ್ಕೆಯ ಉದ್ಯೋಗ ಪಡೆಯಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಚೇಂಬರ್ ಆಫ್ ಕಾಮರ್ಸ್  ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಐಎಂಸಿ, ಕೈಗಾರಿಕಾ ತರಬೇತಿ ಸಂಸ್ಥೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗ ದೊಂದಿಗೆ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿಯ ಮಹಿಳಾ ಸ್ನಾತಕೋತ್ತರ ಕಾಲೇಜಿನ ೧೫೦ಕ್ಕೂ ಅಧಿಕ ಮಂದಿಗೆ ಐಎಎಸ್, ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿ ಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು ಎರಡು ವರ್ಷಗಳ ಬಳಿಕ ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ನಡೆಯುತ್ತಿರುವ ಈ ಉದ್ಯೋಗಮೇಳ ದಲ್ಲಿ ೨೩ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸಿದ್ದು, ೧೫೦೦ಕ್ಕೂ ಅಧಿಕ ಮಂದಿ ಉದ್ಯೋಗಕ್ಕೆ ನೊಂದಾಯಿಸಿಕೊಂಡಿದ್ದಾರೆ ಎಂದರು.

ಜಿಲ್ಲೆಯ ಸ್ಥಳೀಯ ಉದ್ಯಮಿಗಳೂ ಸಹ ಈ ಉದ್ಯೋಗಮೇಳಕ್ಕೆ ಸಹಕಾರ ನೀಡಿದ್ದು, ತಮ್ಮ ಕೈಗಾರಿಕೆಗಳಲ್ಲಿ ಸ್ಥಳೀಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದಾರೆ. ಯುವ ಜನತೆ ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳ ಬೇಕು. ಈ ಉದ್ಯೋಗಮೇಳದಲ್ಲಿ ಗರಿಷ್ಠ ಸಂಖ್ಯೆಯ ಉದ್ಯೋಗ ನೇಮಕಾತಿಗಳು ದೊರೆಯುವಂತಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿ, ಕೌಶಲ್ಯಾಭಿವೃಧ್ದಿ ಹೊಂದುವುದರಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಳವಾಗಲಿದ್ದು, ಸಶಕ್ತ ಮತ್ತು ಸ್ವಾವಲಂಬಿಗಳಾಗಲು ಸಾಧ್ಯವಾಗಲಿದೆ. ಉದ್ಯೋಗ ಮೇಳದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಉದ್ಯೋಗ ಪಡಯಬೇಕು ಎಂದು ಹೇಳಿದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕೆನರಾ ಬ್ಯಾಂಕ್‌ನ ಡಿಜಿಎಂ ಪ್ರದೀಪ್ ಭಕ್ತ, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಡಾ.ವಿಜಯೇಂದ್ರ ರಾವ್, ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಬಾಳಿಗಾ, ಐಎಂಸಿ ಕೈಗಾರಿಕಾ ತರಬೇತಿ ಸಂಸ್ಥೆ ಅಧ್ಯಕ್ಷ ವಿಶ್ವನಾಥ್ ಎಂ.ಭಟ್ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗದೀಶ್ ಪ್ರಾಸಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಆಶ್ರಿತಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News