ಸಮವಸ್ತ್ರ ಕಡ್ಡಾಯ ಸುತ್ತೋಲೆಯನ್ನು ರದ್ದುಗೊಳಿಸಿ, ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ವಿದ್ಯಾರ್ಥಿ ಸಂಘಟನೆಗಳ ಒತ್ತಾಯ
ಬೆಂಗಳೂರು, ಮಾ.29: ಸಮವಸ್ತ್ರದ ಕಡ್ಡಾಯದ ಕುರಿತು ಸರಕಾರವು ಹೊರಡಿಸಿರುವ ಸುತ್ತೋಲೆಯಿಂದ ಎಸೆಸೆಲ್ಸಿ ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಸುತ್ತೋಲೆಯನ್ನು ಹಿಂಪಡೆದು ರದ್ದುಗೊಳಿಸುವಂತೆ ಬಹುಜನ ಕರ್ನಾಟಕ ಸೇರಿದಂತೆ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.
ಈ ಕುರಿತು ಸರಕಾರಕ್ಕೆ ಪತ್ರ ಬರೆದಿದ್ದು, ಸುತ್ತೋಲೆ ಸುತ್ತೋಲೆಯಲ್ಲಿ ಹೊರಡಿಸಿದ ನಂತರ ಹಿಜಾಬ್ ಸೇರಿದಂತೆ ಧಾರ್ಮಿಕತೆಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸುವಂತಿಲ್ಲ ಎಂದು ಸಚಿವ ನಾಗೇಶ್ ಅವರು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ವಿಚಲಿತರಾಗಿದ್ದಾರೆ, ವಿಶೇಷವಾಗಿ ಶತಮಾನಗಳಿಂದ ಹಿಜಾಬ್ ಧರಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತೊಂದರೆ ಆಗುತ್ತಿದೆ ಎಂದು ತಿಳಿಸಲಾಗಿದೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರನ್ನು ವಾಪಸ್ಸು ಕಳುಹಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹಾಗಾಗಿ ಸಮವಸ್ತ್ರ ಕಡ್ಡಾಯಗೊಳಿಸಿರುವ ಸುತ್ತೋಲೆಯನ್ನು ರದ್ದುಪಡಿಸಿ, ಯಾವ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯದಂತೆ ನಿರ್ಬಂಧವೇರಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.