×
Ad

ಎ.11ಕ್ಕೆ ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ; ಪೂರ್ವಭಾವಿ ಸಭೆ

Update: 2022-04-06 20:20 IST

ಉಡುಪಿ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎ.೧೧ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆ ಯಲ್ಲಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಮುಖ್ಯಮಂತ್ರಿಗಳು ಎ.೧೧ರಂದು ಬೆಳಗ್ಗೆ ೧೨ ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಅಪರಾಹ್ನ ೨:೩೦ಕ್ಕೆ ಉಡುಪಿಯಲ್ಲಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಅಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಗ್ರಂಥಾಲಯಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾ ಗ್ರಂಥಾಲಯ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿ ಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ಅನಂತರ ೩:೩೦ಕ್ಕೆ ಬನ್ನಂಜೆಯಲ್ಲಿ ನಿರ್ಮಾಣಗೊಂಡ ನೂತನ ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣವನ್ನು ಉದ್ಘಾಟಿಸಲಿದ್ದು, ಬಳಿಕ ಅಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಪಘಾತ ರಹಿತ ಬಸ್ ಚಾಲನೆ ಮಾಡಿದ ಚಾಲಕರಿಗೆ ಪ್ರಶಸ್ತಿ ವಿತರಣೆ ಮಾಡಲಿದ್ದು, ನಿಗಮದ ಅಧಿಕಾರಿಗಳು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. 

ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ ಜಿಲ್ಲಾಧಿಕಾರಿ, ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಪೌರಾಯುಕ್ತ ಉದಯಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News