ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಟಿ ರವಿ ವಿರುದ್ಧ ದೂರು
Update: 2022-04-06 20:53 IST
ಬೆಂಗಳೂರು, ಎ.6: ಚಂದ್ರು ಕೊಲೆ ಪ್ರಕರಣದಲ್ಲಿ ಕೋಮು ಸೌಹಾರ್ದತೆ ಕದಡುವ ಕೆಲಸಕ್ಕೆ ಮುಂದಾಗಿದ್ದಾರೆಂದು ಆರೋಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.
ಬುಧವಾರ ನಗರದ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ನಿಯೋಗ, ದೂರು ಸಲ್ಲಿಸಿ, ಗೃಹ ಸಚಿವ ಮತ್ತು ಸಿ.ಟಿ.ರವಿ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರು ಕೊಲೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳೇ ಸ್ಪಷ್ಟನೆ ನೀಡಿದ್ದಾರೆ. ಆದರೆ, ಸ್ವತಃ ಗೃಹ ಸಚಿವರು ತಪ್ಪು ಮಾಹಿತಿ ನೀಡಿ ಕೋಮು ದ್ವೇಷ ಹುಟ್ಟುಹಾಕಲು ಮುಂದಾಗಿದ್ದಾರೆ. ಅವರು ಈ ಕೂಡಲೇ ರಾಜೀನಾಮೆ ನೀಡಬೇಕು. ಜೊತೆಗೆ ಅವರ ವಿರುದ್ಧ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದರು.