ರಾಜ್ಯದ ಮಕ್ಕಳಲ್ಲಿ ಅಪೌಷ್ಟಿಕತೆ: ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಕೋರಿಕೆ

Update: 2022-04-07 13:09 GMT

ಬೆಂಗಳೂರು, ಎ.7: ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶಿಫಾರಸು ನೀಡಲು ನೇಮಕ ಮಾಡಲಾಗಿರುವ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಉನ್ನತಮಟ್ಟದ ಸಮಿತಿಗೆ 3 ವಾರಗಳಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಮನವಿ ಮಾಡಿದೆ. 

ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿಯ ವಿಮೋಚನಾ ಸಂಘದ ಮುಖ್ಯಸ್ಥ ಬಿ.ಎಲ್.ಪಾಟೀಲ್ 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೇಂದ್ರ ಸರಕಾರದ ಪರ ವಕೀಲರು ವಾದಿಸಿ, ರಾಜ್ಯದಲ್ಲಿ ಅಂಗನವಾಡಿ ಮಂಜೂರಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಪೀಠಕ್ಕೆ ತಿಳಿಸಿದರು. ರಾಜ್ಯ ಸರಕಾರದ ಪರ ವಕೀಲರು ವಾದಿಸಿ, ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಕಲ್ಪಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. 

ರಾಜ್ಯದಲ್ಲಿನ ಅಪೌಷ್ಟಿಕ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ, ಆರೋಗ್ಯ ತಪಾಸಣೆ ಮಾಡುವ ಕಾರ್ಯಕ್ರಮಗಳ ಮೇಲ್ವಿಚಾರಣೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ರಚಿಸಿ ರಾಜ್ಯ ಸರಕಾರ 2021ರ ಫೆ. 18ರಂದು ಆದೇಶ ಹೊರಡಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News