×
Ad

ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

Update: 2022-04-13 10:16 IST

ಬೆಂಗಳೂರು, ಎ.13: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ‍ ಕಮಿಷನ್ ಕಿರುಕುಳದ ಆರೋಪಿಸಿದ್ದ  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಶ್ವರಪ್ಪರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.

ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ಪಕ್ಷದ ನಿಯೋಗ ಈ ಬಗ್ಗೆ ವಿಸ್ತೃತ ಮನವಿ ಸಲ್ಲಿಸಿದೆ. ಕೆ.ಎಸ್.ಈಶ್ವರಪ್ಪ ಮತ್ತು ಅವರ ಸಂಗಡಿಗರನ್ನು ಅತಿಯಾಗಿ ನಂಬಿ 4 ಕೋಟಿ ರೂ.ಗಳ ಅಂದಾಜು 108ಕ್ಕೂ ಹೆಚ್ಚು ಕಾಮಗಾರಿಗಳನ್ನು ಅಧಿಕಾರಿಗಳಿಂದ ಕಾಮಗಾರಿ ಆದೇಶವಿಲ್ಲದೆ ನಿರ್ವಹಿಸಿದ ಅಮಾಯಕನೊಬ್ಬ ವಿಷಮ ಪರಿಸ್ಥಿತಿಗೆ ಬಲಿಯಾಗಿದ್ದಾನೆ. ಕೆ.ಎಸ್.ಈಶ್ವರಪ್ಪ ಮತ್ತು ಅವರ ಮಿತ್ರರು ಸಂತೋಷ್ ಕೆ.ಪಾಟೀಲ್ ಅವರ ಆತ್ಮಹತ್ಯೆಗೆ ಪ್ರಮುಖ ಕಾರಣರಾಗಿದ್ದಾರೆ. ಇದು ಐಪಿಸಿಯ ಸೆಕ್ಷನ್ -306 ರ ನಿಬಂಧನೆಗಳ ಪ್ರಕಾರ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ -13ರ ನಿಬಂಧನೆಗಳ ಅಡಿಯಲ್ಲಿ ಮರಣದಂಡನೆ ವಿಧಿಸಬಹುದಾದ ಅಪರಾಧವಾಗಿದೆ. ಮಾಡಿದ ಕೆಲಸಗಳ ಹಣ ಬಿಡುಗಡೆಗೆ ಕಮಿಷನ್ ಕೇಳುವುದು ಶಿಕ್ಷಾರ್ಹ ಅಪರಾಧವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದೆ.

ಸಂತೋಷ್ ತನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಆತ್ಮಹತ್ಯೆ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಈ ಹಿನ್ನೆಲೆಯಲ್ಲಿ ಸಚಿವರು ಆತ್ಮಹತ್ಯೆಗೆ ನೇರ ಹೊಣೆಯಾಗಿದ್ದು ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಆದ್ದರಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಮಂತ್ರಿಮಂಡಲದಿಂದ ಕೆ.ಎಸ್.ಈಶ್ವರಪ್ಪರನ್ನು ವಜಾಗೊಳಿಸಬೇಕು, ಈಶ್ವರಪ್ಪ ಮತ್ತು ಅವರ ಮಿತ್ರರ ಕುಮ್ಮಕ್ಕಿನಿಂದ ಸಂತೋಷ್ ಕೆ.ಪಾಟೀಲ್ ಆತ್ಮಹತ್ಯೆಗೆ ಶರಣಾದ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು, ಐಪಿಸಿ ಸೆಕ್ಷನ್-306 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್-13 ಮತ್ತು ಕಾನೂನಿನ ಇತರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಕ್ರಿಮಿನಲ್ ಮೊಕದ್ದಮೆಯನ್ನು ತಕ್ಷಣವೇ ದಾಖಲಿಸಬೇಕು. ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ದೃಷ್ಟಿಯಿಂದ ಕೆ.ಎಸ್.ಈಶ್ವರಪ್ಪರನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ನಿಯೋಗದಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News