ಎ.16: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನಾ ಮೆರವಣಿಗೆ
ಉಡುಪಿ : ಬಿಜೆಪಿ ಸರ್ಕಾರದ ೪೦% ಕಮಿಷನ್ ಆಡಳಿತ ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಕಾರಣವಾಗಿದ್ದು, ಈ ಪ್ರಕರಣದಲ್ಲಿ ಗ್ರಾಮೀಣಾಭಿದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಮುಖ ಆರೋಪಿಯಾಗಿರುವುದರಿಂದ ಅವರನ್ನು ಭ್ರಷ್ಟಾಚಾರ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಿ ಕಾನೂನಾತ್ಮಕ ಕ್ರಮವನ್ನು ಜರಗಿಸುವಂತೆ ಒತ್ತಾಯಿಸಲು ಉಡುಪಿ ಜಿಲ್ಲಾ ಕಾಂಗ್ರೇಸ್ ಸಮಿತಿಯ ನೇತೃತ್ವದಲ್ಲಿ ಎ.16ರ ಶನಿವಾರ ಬೆಳಗ್ಗೆ 10ಕ್ಕೆ ಬ್ರಹ್ಮಗಿರಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬೃಹತ್ ಪ್ರತಿಭಟನೆಯನ್ನು ಅಯೋಜಿಸಲಾಗಿದೆ.
ಈ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಮುಖಂಡರು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು, ಕಾರ್ಯ ಕರ್ತರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಆದೇಶದಂತೆ ರಾಜ್ಯಾದ್ಯಂತ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆಯ ನೇತೃತ್ವವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿಗಳೂ ಆಗಿರುವ ಡಾ.ಜಿ. ಪರಮೇಶ್ವರ ವಹಿಸುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.