ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ಸಿಎಂ ಇಬ್ರಾಹೀಂ ಪದಗ್ರಹಣ
Update: 2022-04-16 18:33 IST
ಬೆಂಗಳೂರು, ಎ. 16: ಕೇಂದ್ರದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ. ಇಬ್ರಾಹೀಂ ಅವರು ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ನಾಳೆ(ಎ.17) ಪದಗ್ರಹಣ ಮಾಡಲಿದ್ದಾರೆ' ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಶನಿವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಪ್ರಸ್ತುತ ರಾಜ್ಯಾಧ್ಯಕ್ಷ, ಸಕಲೇಶಪುರ ಕ್ಷೇತ್ರದ ಹಾಲಿ ಶಾಸಕರೂ ಆದ ಎಚ್.ಕೆ.ಕುಮಾರಸ್ವಾಮಿ ಅವರು ನಾಳೆಯೇ ಜೆಡಿಎಸ್ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10:15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ಎಚ್.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಇನ್ನಿತರ ಮುಖಂಡರು ನಾಯಕರು ಭಾಗವಹಿಸಲಿದ್ದಾರೆ ಎಂದು ವಿವರ ನೀಡಿದರು.