ನೆಲ, ಜಲ ರಕ್ಷಣೆ ಜೆಡಿಎಸ್‍ನಿಂದ ಮಾತ್ರ ಸಾಧ್ಯ: ಎಚ್.ಡಿ. ದೇವೇಗೌಡ

Update: 2022-04-16 18:32 GMT

ಮಂಡ್ಯ, ಎ.16: ರಾಜ್ಯದ ನೆಲ, ಜಲ ರಕ್ಷಣೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ಬದ್ದವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗಾಗಿ ಜೆಡಿಎಸ್ ಹಮ್ಮಿಕೊಂಡಿರುವ ಜನತಾ ಜಲಧಾರೆ-ಗಂಗಾ ರಥಯಾತ್ರೆಗೆ ಕೆಆರ್‍ಎಸ್‍ನಲ್ಲಿ ಚಾಲನೆ ನೀಡಿದ ನಂತರ, ಶ್ರೀರಂಗಪಟ್ಟಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

ನೀರಿನ ವಿಚಾರದಲ್ಲಿ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಯಾವುದೇ ಕಾರಣಕ್ಕೂ ಕಾಂಗೆಸ್, ಜೆಪಿಯಿಂದ ನ್ಯಾಯ ಸಿಗುವುದಿಲ್ಲ. ನಮ್ಮ ನೀರು ನಮ್ಮ ಹಕ್ಕು. ಅದನ್ನು ದಕ್ಕಿಸಿಕೊಳ್ಳಲು ಜೆಡಿಎಸ್‍ಗೆ ಮಾತ್ರ. ಹಾಗಾಗಿ ಈ ಜನತಾ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದ ಯಾವೊಂದು ನೀರಾವರಿ ಯೋಜನೆಗಳನ್ನು ಸಾಕಾರಗೊಳಿಸಲು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ದೃಢ ಸಂಕಲ್ಪ ಮಾಡಿ ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಜನತೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ಸಂಸದನಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ನೀರಿನ ವಿಚಾರದಲ್ಲಿ ಏಕಾಂಗಿಯಾಗಿ ಹೊರಾಟ ಮಾಡಿದ್ದೇನೆ. ಜತೆಗೆ ಪ್ರಾದೇಶಿಕ ಪಕ್ಷವನ್ನು ಬೆಳೆಸಿದ್ದೇನೆ. ಈ ಪಕ್ಷವನ್ನು ಅಧಿಕಾರಕ್ಕೆ ತರುವ ಹೊಣೆ ಕಾರ್ಯಕರ್ತರ ಮೇಲಿದೆ ಎಂದು ಅವರು ಕರೆ ನೀಡಿದರು.

ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸಿ.ಎಸ್.ಪುಟ್ಟರಾಜು, ಎಂ.ಶ್ರೀನಿವಾಸ್, ವಿಧಾನಪರಿಷತ್ ಮಾಜಿ ಸದಸ್ಯರಾದ ಎನ್.ಅಪ್ಪಾಜಿಗೌಡ, ಶರವಣ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News