ಹೊಸದಿಲ್ಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಘರ್ಷಣೆ; ಪೊಲೀಸರು ಸೇರಿ ಹಲವರಿಗೆ ಗಾಯ

Update: 2022-04-16 18:46 GMT
photo: twitter/KMShrma

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ನಡುವೆ ಘರ್ಷನೆ ನಡೆದಿರುವುದಾಗಿ ವರದಿಯಾಗಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದ್ದು,  ನಂತರ ನಡೆದ ದೊಂಬಿಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ndtv.com ವರದಿ ಮಾಡಿದೆ.

ಘರ್ಷಣೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ರಸ್ತೆಯ ವಿವಿಧ ಬದಿಗಳಲ್ಲಿ ಜನರ ದೊಡ್ಡ ಗುಂಪುಗಳು ಪರಸ್ಪರ ಕಲ್ಲು ತೂರಾಟವನ್ನು ನಡೆಸುವ ದೃಶ್ಯ ದಾಖಲಾಗಿದೆ.

ಗಲಾಟೆಯು ಜಹಾಂಗೀರ್‌ಪುರಿ ಮಾತ್ರವಲ್ಲದೆ ಇತರ ಅಕ್ಕಪಕ್ಕದ ಮತ್ತು ಸೂಕ್ಷ್ಮ ಪ್ರದೇಶಗಳಿಗೂ ಹಬ್ಬಿದ್ದು, ಅಲ್ಲೂ ಘರ್ಷಣೆ ನಡೆದಿವೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಹೇಳಿದ್ದಾರೆ.

"ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ತೊಂದರೆಗೀಡಾದ ಪ್ರದೇಶಗಳಿಗೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಗಸ್ತು ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳನ್ನು ತಮ್ಮ ಪ್ರದೇಶಗಳಲ್ಲಿರಲು ಕೇಳಲಾಗಿದೆ. ಕ್ಷಿಪ್ರ ಕಾರ್ಯಪಡೆಯ (RAF) ಎರಡು ತಂಡವನ್ನು ಸಹ ನಿಯೋಜಿಸಲಾಗಿದೆ. ಜಹಾಂಗೀರ್‌ಪುರಿ ಸುತ್ತಮುತ್ತ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಆದರೆ ಗಾಯಗಳ ಸ್ವರೂಪವನ್ನು ತನಿಖೆಯ ನಂತರವೇ ತಿಳಿಯಬಹುದು" ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಗಲಭೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವಿಟರ್‌ನಲ್ಲಿ ತಿಳಿಸಿರುವ ಅಸ್ಥಾನಾ, ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಜನರಿಗೆ ಮನವಿ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸ್ಥಾನಾ ಮತ್ತು ದೆಹಲಿ ಪೊಲೀಸ್ ವಿಶೇಷ ಪೊಲೀಸ್ ಆಯುಕ್ತ, ಕಾನೂನು ಮತ್ತು ಸುವ್ಯವಸ್ಥೆ, ದೇವೇಂದ್ರ ಪಾಠಕ್ ಅವರೊಂದಿಗೆ ಮಾತನಾಡಿದ್ದಾರೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸುವಂತೆ ಸೂಚಿಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಲ್ಲು ತೂರಾಟವನ್ನು ಖಂಡಿಸಿದ್ದಾರೆ ಮತ್ತು ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪರಸ್ಪರರ ಕೈ ಹಿಡಿದು ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಅವರು ತಿಳಿಸಿದ್ದಾರೆ.

ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಇಲ್ಲದೆ ದೇಶ ಪ್ರಗತಿ ಹೊಂದಲು ಸಾಧ್ಯವಿಲ್ಲ. ಎಲ್ಲರೂ ಶಾಂತಿ ಸುವ್ಯವಸ್ಥೆ ಕಾಪಾಡಬೇಕು, ಬೇಕಾದರೆ ಪೊಲೀಸರು, ಏಜೆನ್ಸಿಗಳಿವೆ, ಇಲ್ಲಿ ಶಾಂತಿ ಕಾಪಾಡುವ ಹೊಣೆ ಕೇಂದ್ರ ಸರ್ಕಾರದ್ದು, ಶಾಂತಿ ಕಾಪಾಡುವಂತೆ ಜನರಲ್ಲಿಯೂ ಮನವಿ ಮಾಡುತ್ತೇನೆ ಎಂದರು.

ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ ಕೇಜ್ರಿವಾಲ್‌, "ಗೌರವಾನ್ವಿತ ಎಲ್‌ಜಿ ಅವರೊಂದಿಗೆ ಮಾತನಾಡಿದರು. ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ" ಎಂದು ಅವರು ಭರವಸೆ ನೀಡಿದ್ದಾರೆ.

ಗಾಯಗೊಂಡವರೆಲ್ಲರನ್ನು ಚಿಕಿತ್ಸೆಗಾಗಿ ಜಹಾಂಗೀರಪುರಿಯ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News