×
Ad

ಡಿಕೆ ಶಿವಕುಮಾರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ; ಆರೋಪಿ ಸಾಯಿ ಗಿರಿಧರ್‌ಗೆ ಜೈಲು ಶಿಕ್ಷೆ

Update: 2022-04-18 22:36 IST
ಸಾಯಿ ಗಿರಿಧರ್‌

ಸುಳ್ಯ : ಡಿ.ಕೆ. ಶಿವಕುಮಾರ್ ವಿದ್ಯುತ್ ಸಚಿವರಾಗಿದ್ದ ಸಂದರ್ಭ ಅವರಿಗೆ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆಯ ಸಾಯಿ ಗಿರಿಧರ್ ರೈ ಎಂಬಾತನಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

ಸುಳ್ಯದಲ್ಲಿ ವಿದ್ಯುತ್ ಕಡಿತದ ಬಗ್ಗೆ ಸಾಯಿ ಗಿರಿಧರ ರೈ 2016 ಫೆಬ್ರವರಿ 28 ರಂದು ವಿದ್ಯುತ್ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಫೋನ್‌ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಗಿರಿಧರ ರೈ ವಿರುದ್ಧ ದೂರು ನೀಡಲಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗಿರಿಧರ್ ರೈ ನನ್ನು ಬಂಧಿಸಿದ್ದರು. ಘಟನೆಯ ಕುರಿತಂತೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು. ಸುಳ್ಯ ಪೊಲೀಸ್ ಠಾಣೆಯ ಆಗಿನ ಎಸ್.ಐ. ಚಂದ್ರಶೇಖರ್ ಎಚ್.ವಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸುಳ್ಯ ನ್ಯಾಯಾಲಯದಲ್ಲಿ ಈ ಕುರಿತಂತೆ ವಿಚಾರಣೆ ನಡೆಯುತ್ತಿತ್ತು. ಸಾಕ್ಷಿಗಳ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನೂ ಸಾಕ್ಷಿಯನ್ನಾಗಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು. ಕಳೆದ ವರ್ಷ ಅ. 5ರಂದು ಡಿ ಕೆ ಶಿವಕುಮಾರ್ ಸುಳ್ಯಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿದಿದ್ದರು. ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು ಇಂದು ಸುಳ್ಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸೋಮಶೇಖರ್ ಎ. ರವರು ತೀರ್ಪು ಪ್ರಕಟಿಸಿದರು.

ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದ್ದು, 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ ಎಪಿಪಿ ಜನಾರ್ಧನ ಬಿ. ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News