ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳು ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರ ಧರಿಸುವಂತಿಲ್ಲ; ಸಚಿವ ಬಿ.ಸಿ ನಾಗೇಶ್

Update: 2022-04-19 18:40 GMT

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರ ಧರಿಸುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವಿತೀಯ ಪಿಯು ಪರೀಕ್ಷೆಯನ್ನು ಬರೆಯುತ್ತಿರುವ ವಿದ್ಯಾರ್ಥಿಗಳು ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರವನ್ನು ಧರಿಸುವಂತಿಲ್ಲ. ಈ ನಿಟ್ಟಿನಲ್ಲಿ ಸರಕಾರ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು. ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಸಮವಸ್ತ್ರದಿಂದ ವಿನಾಯಿತಿ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.  

ದ್ವಿತೀಯ ಪಿಯು ಪರೀಕ್ಷೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 6,00,519 ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಾಗಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 21,928 ಖಾಸಗಿ ಅಭ್ಯರ್ಥಿಗಳು ಆಗಿದ್ದಾರೆ ಎಂದು ಮಾಹಿತಿ ನೀಡಿದರು. 

ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಲು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್ ಬಂದೋಬಸ್ತ್ ಇರಲಿದೆ. ಪಿಯು ಪರೀಕ್ಷೆ ಸಂಬಂಧಿಸಿದ ಎಲ್ಲ ಕಾರ್ಯಗಳು ಪೊಲೀಸ್ ಬಂದೋಬಸ್ತ್‍ನಲ್ಲಿ ನಡೆಯಲಿವೆ. 24/7 ಸಿಸಿಟಿವಿ ಕ್ಯಾಮೆರಾ ನಿಗಾ ಇರಲಿದೆ ಎಂದು ಅವರು ತಿಳಿಸಿದರು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ನಿಗಾ ಇರಿಸಲು ಜಾಗೃತ ದಳಗಳು ಕಾರ್ಯ ನಿರ್ವಹಿಸಲಿವೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಹಿಂದೆ ನಕಲು ಪ್ರಯತ್ನ ನಡೆದಿರುವ ಪರೀಕ್ಷಾ ಕೇಂದ್ರಗಳ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಕುರಿತು ಹಲವು ಸುತ್ತಿನ ಸಭೆಗಳು ನಡೆದಿವೆ ಎಂದು ಅವರು ತಿಳಿಸಿದರು.

ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನಗಳಂದು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಪ್ರಯಾಣಿಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News