ಕೆಎಂಎಫ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ : ಸಿಓಡಿ ತನಿಖೆ ದಸಂಸ ಆಗ್ರಹ
ಉಡುಪಿ : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಹುದ್ದೆ ನೇಮಕಾತಿಯಲ್ಲಿ ನಡೆದಿರುವ ಅವ್ಯವ ಹಾರದ ಬಗ್ಗೆ ಸಿಓಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ರಮೇಶ್ ಕೋಟ್ಯಾನ್ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಮಕಾತಿ ಪರೀಕ್ಷೆಯಲ್ಲಿ ಆಡಳಿತ ಮಂಡಳಿಯ ಸ್ವಜನ ಪಕ್ಷಪಾತದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರ ಹಿಂದುಳಿದ ವರ್ಗ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ರೈತ ಸಮುದಾಯದ ಅಭ್ಯರ್ಥಿಗಳಿಗೆ ತುಂಬಾ ಅನ್ಯಾಯವಾಗಿದೆ ಎಂದು ದೂರಿದರು.
ಇದರ ವಿರುದ್ಧ ಈ ಹಿಂದೆ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದು, ಸರಕಾರದ ಪ್ರಧಾನ ಕಾರ್ಯದರ್ಶಿಗಳು ಸಹಕಾರ ಇಲಾಖೆ ಬೆಂಗಳೂರು ಇವರಿಂದ ತನಿಖೆ ನಡೆಸಿ ವರದಿ ಕಳುಹಿಸುವಂತೆ ಆದೇಶಿಸಲಾಗಿದೆ. ಆದರೆ ಈ ತನಿಖೆಯನ್ನು ಪ್ರಭಾವ ಬಳಸಿ ತಡೆ ಹಿಡಿಯಲಾಗಿದೆ. ಅದೇ ರೀತಿ ಈ ಕುರಿತು ಎ.೧೯ರಂದು ಉಡುಪಿ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರಶಾಂತ್ ತೊಟ್ಟಂ, ಸಂಜೀವ ಬಳ್ಕೂರು ಉಪಸ್ಥಿತರಿದ್ದರು.