×
Ad

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಉತ್ತಮ ಸೇವೆ ನೀಡಿ: ಸುಮಿತ್ರಾ ನಾಯಕ್

Update: 2022-04-21 19:35 IST

ಉಡುಪಿ: ಸರಕಾರದ ಕೆಲಸ ದೇವರ ಕೆಲಸ ಅಲ್ಲ. ಅದು ಸಾರ್ವಜನಿಕರ ಕೆಲಸ. ಆದ್ದರಿಂದ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸರಕಾರಿ ಸೇವೆಗಳನ್ನು ತಲುಪಿಸಿದರೆ, ಅಂಥ ನೌಕರರಿಗೆ ಸಾರ್ವಜನಿಕರ ಮೆಚ್ಚುಗೆ ದೊರೆಯುತ್ತದೆ ಎಂದು ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದ್ದಾರೆ.

ಗುರುವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಹಾಗೂ ೨೦೨೧ ಮತ್ತು ೨೨ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ಸರಕಾರಿ ನೌಕರರು ಸರಕಾರದ ಎಲ್ಲಾ ಸೇವೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಂತೆ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಸಮಸ್ತ ಸರಕಾರಿ ನೌಕರರಿಗೆ ಕಿವಿಮಾತು ಹೇಳಿದರು.

ಸರಕಾರಿ ಸೇವೆಗಳನ್ನು ಅರಸಿ ಬರುವ ಜನತೆಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸಿ. ಒಂದು ವೇಳೆ ನಿಮ್ಮಲ್ಲಿ ಆ ಸೇವೆ ಲಭ್ಯವಿಲ್ಲದಿದ್ದರೆ ಅವರಿಗೆ ಸೂಕ್ತ ಮಾಹಿತಿ ನೀಡಿ. ಅನಾವಶ್ಯಕವಾಗಿ ಅವರನ್ನು ಕಚೇರಿಗೆ ಅಲೆದಾಡಿಸಬೇಡಿ ಎಂದ ಸುಮಿತ್ರಾ ನಾಯಕ್, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಮಾಣಿಕ ಸರಕಾರಿ ನೌಕರರು ಇದ್ದು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ನೌಕರರು ಮಾನಸಿಕ ಒತ್ತಡಗಳಿಗೆ ಒಳಗಾಗದೇ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಸರಕಾರಿ ನೌಕರರು ನಾಗರೀಕ ಸೇವಾ ಧ್ಯೇಯಗಳನ್ನು ರೂಢಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಉತ್ತಮ ಸೇವೆಯ ಮೂಲಕ ಸಾರ್ವಜನಿಕರ ಬದುಕಿನಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ. ಜಿಲ್ಲೆಯಲ್ಲಿ ವಿಕೋಪದ ಸಂದರ್ಭಗಳಲ್ಲಿ ನೌಕರರು ಅತ್ಯುತ್ತಮವಾಗಿ ಕಾರ್ಯನಿರ್ವಹಿ ಸುತಿದ್ದು, ಉಳಿದ ಸಮಯದಲ್ಲೂ ಸಹ ಇದೇ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾತನಾಡಿ, ಜಿಲ್ಲೆಯ ಸರಕಾರಿ ನೌಕರರು ಉತ್ತಮವಾಗಿ ಕೆಲಸ ನಿರ್ವಹಿಸು ತ್ತಿರುವ ಕಾರಣ ಭೂಮಿ ಸೇವೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಸತತವಾಗಿ ಪ್ರಥಮ ಸ್ಥಾನದಲ್ಲಿದ್ದು, ಸಕಾಲ ಸೇವೆ ನೀಡುವಲ್ಲಿ ಸಹ ಉತ್ತಮ ಸ್ಥಾನದಲ್ಲಿದೆ. ಎಲ್ಲಾ ಕಚೇರಿಗಳಲ್ಲಿ ಕಡತಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಮತ್ತು ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದಂತೆ ಭ್ರಷ್ಠಾಚಾರ ರಹಿತವಾಗಿ, ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ೨೦೧೯-೨೦ ಮತ್ತು ೨೦೨೦-೨೧ನೇ ಸಾಲಿನ ಸರ್ವೋತ್ತಮ ಪ್ರಶಸ್ತಿಗಳನ್ನು  ತಲಾ ೧೦ ಮಂದಿಯಂತೆ ಒಟ್ಟು ೨೦ ಮಂದಿ ಸರಕಾರಿ ನೌಕರರಿಗೆ ವಿತರಿಸಲಾಯಿತು. ಇದರೊಂದಿಗೆ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ. ರಾಮ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ  ರಾವ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಹೆಬ್ರಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಕಾಪು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ, ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಅತಿಥಿಗಳನ್ನು ಸ್ವಾಗತಿಸಿದರೆ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ ವಂದಿಸಿದರು. ಉಪಾಧ್ಯಕ್ಷ ಪ್ರಶಾಂತ್ ಹಾವಂಜೆ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News