ದ್ವಿತೀಯ ಪಿಯು ಪರೀಕ್ಷೆ; ಉಡುಪಿ ಜಿಲ್ಲೆಯಲ್ಲಿ 141 ಮಂದಿ ವಿದ್ಯಾರ್ಥಿಗಳು ಗೈರು

Update: 2022-04-22 13:13 GMT

ಉಡುಪಿ : ದ್ವಿತೀಯ ಪಿಯು ಪರೀಕ್ಷೆಯು ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನದ ವಾಣಿಜ್ಯ ವಿಭಾಗದ ಬ್ಯುಸಿನೆಸ್ ಸ್ಟಡೀಸ್ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 141 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಜಿಲ್ಲೆಯ 28 ಕೇಂದ್ರಗಳಲ್ಲಿ ನಡೆದ ಈ ಪರೀಕ್ಷೆಗೆ ಒಟ್ಟು 8134 ವಿದ್ಯಾರ್ಥಿ ಗಳು ನೊಂದಾಯಿಸಿಕೊಂಡಿದ್ದು, ಅವರ ಪೈಕಿ 7993 ಮಂದಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಗೈರು ಹಾಜರಾದ 141 ಮಂದಿಯಲ್ಲಿ 37 ಮುಸ್ಲಿಮ್ ವಿದ್ಯಾರ್ಥಿಗಳಿದ್ದಾರೆ.

ಇವರಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣಕ್ಕೆ ವಾಪಾಸ್ಸಾಗಿರುವವರು ಉಡುಪಿಯ ಇಬ್ಬರು ವಿದ್ಯಾರ್ಥಿನಿಯರು ಮಾತ್ರ. ಉಳಿದ ವಿದ್ಯಾರ್ಥಿಗಳು ಯಾರು ಕೂಡ ಪರೀಕ್ಷಾ ಕೇಂದ್ರಕ್ಕೆ ಬಾರದೆ ಮನೆಯಲ್ಲಿ ಉಳಿದುಕೊಂಡಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ತಿಳಿಸಿದ್ದಾರೆ.

ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 21 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಈ ಹಿಂದೆ ವಿವಾದಕ್ಕೆ ಕಾರಣವಾಗಿದ್ದ ಕುಂದಾಪುರ ಜ್ಯೂನಿಯರ್ ಕಾಲೇಜಿನ ಐವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ ಎಂದು ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲಾಧಿಕಾರಿ ಭೇಟಿ

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದರು. ಬಳಿಕ ಕಾಲೇಜಿನ ಪ್ರಾಂಶುಪಾಲರೊಂದಿಗೆ ಅವರು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಪರೀಕ್ಷೇ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಸಿಸಿಟಿವಿ ವ್ಯವಸ್ಥೆ, 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಮಾಡಲಾಗಿದೆ. ವೀಕ್ಷಕರನ್ನು ಕೂಡ ನೇಮಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News