×
Ad

ಒಂದೇ ಸೂರಿನಡಿ ಎಲ್ಲಾ ವೈದ್ಯಕೀಯ ಸೇವೆ ನೀಡಲು ಆರೋಗ್ಯ ಮೇಳ: ಸಂಸದೆ ಶೋಭಾ ಕರಂದ್ಲಾಜೆ

Update: 2022-04-23 19:24 IST

ಉಡುಪಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ನಡೆಯುವ ತಾಲೂಕು ಮಟ್ಟದ ಆರೋಗ್ಯ ಸಪ್ತಾಹದ ಮೂಲಕ ಸಾರ್ವಜನಿಕರಿಗೆ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ಸೇವೆಗಳನ್ನು  ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆರೋಗ್ಯ ಮೇಳಗಳನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೋಟರಿ ಮಿಡ್‌ಟೌನ್, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಅಜ್ಜರಕಾಡಿನಲ್ಲಿರುವ ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ಉಡುಪಿ ತಾಲೂಕು ಮಟ್ಟದ ಬೃಹತ್ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೈನಂದಿನ ಬದುಕಿನ ಒತ್ತಡಗಳು ಹಾಗೂ ಬದಲಾದ ಜೀವನಶೈಲಿಯಿಂದ ಅನೇಕ ರೋಗಗಳು ನಮ್ಮನ್ನು ಕಾಡುತ್ತಿದ್ದು, ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಅಗತ್ಯ ಚಿಕಿತ್ಸೆ ದೊರೆಯ ಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಎಲ್ಲಾ ಇಲಾಖೆಗಳು ಮತ್ತು ಅವುಗಳ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕು ಎನ್ನುವುದು ಪ್ರಧಾನಮಂತ್ರಿಗಳ ಆಶಯವಾಗಿದೆ ಎಂದರು.

ನಾವು ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ  ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್, ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಅರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದವರು ಹೇಳಿದರು.

ಆಯುಷ್ಮಾನ್ ಆರೋಗ್ಯ ಕಾರ್ಡ್ ಯೋಜನೆಯ ಮೂಲಕ ನಿಗದಿತ ಆಸ್ಪತ್ರೆಗಳಲ್ಲಿ ಕುಟುಂಬವೊಂದು 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯ ಬಹುದಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು. ಕೇಂದ್ರ ಸರಕಾರವು ಆಯುರ್ವೇದ ಚಿಕಿತ್ಸೆಯ ಬಗ್ಗೆ ಸಹ ಒತ್ತು ನೀಡಿದೆ. ಉಡುಪಿ ಜಿಲ್ಲೆಯ ವಿಕಲಚೇತನರಿಗೆ ಕೇಂದ್ರ ಸರಕಾರದ ಎಲಿಮ್ಕೋ ವತಿಯಿಂದ ಉಚಿತ ಸಾಧನ ಸಲಕರಣೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಉಡುಪಿಯಲ್ಲಿ ೧೫೦ ಕೋಟಿ ರೂ.ವೆಚ್ಚದಲ್ಲಿ ೨೫೦ ಹಾಸಿಗೆಗಳ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ೨೦೦ ಹಾಸಿಗೆ ಸಾಮರ್ಥ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನೂ ಸಹ ಸರಕಾರ ಶೀಘ್ರವೇ ತನ್ನ ಸುರ್ಪದಿಗೆ ಪಡೆಯಲಿದೆ. ಉಡುಪಿಯಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಡಿಪಿಆರ್ ತಯಾರಿ ನಡೆಯುತ್ತಿದೆ. ಡಿಪಿಆರ್ ಪೂರ್ಣಗೊಂಡ ನಂತರ, ಜಿಲ್ಲೆಯ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಚರ್ಚಿಸಿ ಗ್ಲೋಬಲ್ ಟೆಂಡರ್ ಮೂಲಕ  ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಒಟ್ಟಿನಲ್ಲಿ ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾಸ್ಪತ್ರೆಯ ಮೂಲಕ ಜಿಲ್ಲೆಯ ಜನತೆಗೆ ಎಲ್ಲಾ ರೀತಿಯ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಸದಸ್ಯೆ ರಾದ ಲಕ್ಷ್ಮೀ ಭಟ್, ರಶ್ಮಿ ಚಿತ್ತರಂಜನ್ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಸತೀಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ಹಾಗೂ ಯುಡಿಐಡಿಗಳನ್ನು ವಿತರಿಸಲಾ ಯಿತು. ಅರೋಗ್ಯ ಮೇಳದಲ್ಲಿ ೨೦ಕ್ಕೂ ಅಧಿಕ ಉಚಿತ ವೈದ್ಯಕೀಯ ಸೇವೆಗಳು ಮತ್ತು ಯೋಜನೆಗಳ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಯಿತು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಸ್ವಾಗತಿಸಿದರು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News