ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತನ್ನ ಹೆಸರು ಬೇಡ ಎಂದು ಸಿಎಂಗೆ ಪತ್ರ ಬರೆದ ಯಡಿಯೂರಪ್ಪ

Update: 2022-04-24 11:34 GMT

ಶಿವಮೊಗ್ಗ : ಶಿವಮೊಗ್ಗ ಹೊಸ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ “ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀರು ಹಾಗು ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ಯಡಿಯೂರಪ್ಪ “ಶಿವಮೊಗ್ಗ ಜಿಲ್ಲೆಯ ಬಹುದಿನಗಳ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸರು, ವಿಧಾನ ಪರಿಷತ್‌ ಸದಸ್ಯರು, ಸಂಘಸಂಸ್ಥೆಗಳು ಹಾಗು ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗು ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗು  ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.

ಆದುದರಿಂದ ತಮ್ಮ  ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ ನಾಡಿನ ಅಭಿವೃದ್ಧಿಗೆ ಹಾಗು ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News