ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಿ: ಮುಖ್ಯಮಂತ್ರಿಗಳಿಗೆ ಪ್ರಧಾನಿ ಸಲಹೆ‌

Update: 2022-04-27 17:24 GMT

ಹೊಸದಿಲ್ಲಿ, ಎ 27: ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆಯ ನಡುವೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿ ಅರ್ಹ ಮಕ್ಕಳಿಗೆ ಆದಷ್ಟು ಶೀಘ್ರ ಆದ್ಯತೆ ನೆಲೆಯಲ್ಲಿ ಲಸಿಕೆ ನೀಡಿ ಎಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಅವರು ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು. 

ಈ ಸಭೆಯಲ್ಲಿ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್‌ ನ ಭಗವಂತ್ ಮಾನ್, ಚತ್ತೀಸ್ಗಢದ ಭೂಪೇಶ್ ಭಾಗೇಲ್ ಹಾಗೂ ಇತರರು ಪಾಲ್ಗೊಂಡಿದ್ದರು. ಇತರ ರಾಷ್ಟ್ರಗಳಿಗೆ ಹೋಲಿಸಿದರೆ, ನಾವು ಕೋವಿಡ್ ಬಿಕ್ಕಟ್ಟನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದರೂ ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದನ್ನು ಕಾಣಬಹುದು. ನಾವು ಜಾಗರೂಕರಾಗಿರಬೇಕು ಎಂದು ಪ್ರಧಾನಿ ಹೇಳಿದರು.

 ‘‘ದೇಶದ ಶೇ. 96 ವಯಸ್ಕರು ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ಅನ್ನು ತೆಗೆದುಕೊಂಡಿರುವುದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಟ್ಟುಕೊಳ್ಳುವ ವಿಚಾರ’’ ಎಂದು ಅವರು ತಿಳಿಸಿದರು. ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ರಾಜ್ಯಗಳಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದು ಅವರು ಹೇಳಿದರು. ಕೇಂದ್ರ ಹಾಗೂ ರಾಜ್ಯಗಳ ನಡುವೆ ಸಹಕಾರಕ್ಕೆ ಕರೆ ನೀಡಿದ ಪ್ರಧಾನಿ ಅವರು, ಉಕ್ರೇನ್ ಯುದ್ಧ ಪೂರೈಕೆ ಸರಪಣಿಯ ಮೇಲೆ ಪರಿಣಾಮ ಉಂಟು ಮಾಡಿದೆ, ಹಲವು ಸವಾಲುಗಳನ್ನು ಒಡ್ಡಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News