ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಕುಮಾರಸ್ವಾಮಿ

Update: 2022-04-28 12:45 GMT

ಬೆಂಗಳೂರು, ಎ. 28: ‘ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ' ಎಂದು ಸಲಹೆ ನೀಡಿದ್ದಾರೆ.

‘ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೆ ಭಾಷೆ, ಇಲ್ಲವೇ 3ನೆ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ‘ಹಿಂದಿ ರಾಜಕೀಯ ಪಕ್ಷಗಳು' ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ. ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ

‘ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ ‘ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು. ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಢ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News