ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಸಭಾಪತಿ ಬಸವರಾಜ ಹೊರಟ್ಟಿ

Update: 2022-05-03 12:40 GMT

ಬೆಂಗಳೂರು, ಮೇ 3: ಜಾತ್ಯತೀತ ಜನತಾ ದಳ(ಜೆಡಿಎಸ್)ನ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಪಕ್ಷ ತೊರೆದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮಂಗಳವಾರ ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಸವರಾಜ ಹೊರಟ್ಟಿ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ ಶೆಟ್ಟರ್ ಸಹಿತ ಇನ್ನಿತರ ಮುಖಂಡರು ಹಾಜರಿದ್ದರು.

ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತ ಏಳು ಬಾರಿ ಪರಿಷತ್‍ಗೆ ಆಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರನೆಂಬ ಖ್ಯಾತಿಗೆ ಪಾತ್ರರಾಗಿದ್ದ ಹಿರಿಯ ಮುಖಂಡ ಹೊರಟ್ಟಿ ಅವರು ಮುಂದಿನ ಚುನಾವಣೆಯನ್ನು ಬಿಜೆಪಿಯಿಂದ ಎದುರಿಸಲು ತೀರ್ಮಾನಿಸಿದ್ದಾರೆ. ಆ ಹಿನ್ನೆಲೆಯಲ್ಲೇ ಜೆಡಿಎಸ್ ತೊರೆದು ಬಿಜೆಪಿ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದಾರೆ.

ಮೇ 11ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ: ಬಿಜೆಪಿ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೊರಟ್ಟಿ, ‘ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರ ಅಭಿಪ್ರಾಯದಂತೆ ನಾನು ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದೇನೆ' ಎಂದು ಪ್ರಕಟಿಸಿದರು.

‘ಮೇ 11ಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆ ಬಳಿಕ ಬಿಜೆಪಿ ಸೇರ್ಪಡೆ ಉದ್ದೇಶವಿತ್ತು. ಆದರೂ, ಅದಕ್ಕೂ ಮೊದಲೇ ಸೇರ್ಪಡೆಯಾಗಿದ್ದೇನೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ಸಂಬಂಧ ಪಕ್ಷದ ವರಿಷ್ಟರು ನಿರ್ಧರಿಸಲಿದ್ದಾರೆ' ಎಂದು ಅವರು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News