ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿ 17 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2022-05-05 13:34 GMT
ಗೌರವ್ ಗುಪ್ತಾ

ಬೆಂಗಳೂರು, ಮೇ 5: ರಾಜ್ಯ ಸರಕಾರವು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸ್ಥಳ ನಿಯುಕ್ತಿ ಮಾಡಿದೆ. 

ಗುರುವಾರ ಈ ಕುರಿತು ಸರಕಾರವು ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಿ, ಮೂಲ ಸೌಕರ್ಯಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ, ಬಿಬಿಎಂಪಿಯ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಕೆ ಅನಿಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ವಿ. ಪೊನ್ನುರಾಜ್ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ಪ್ರಭಾರ ಹುದ್ದೆಯನ್ನು ವಹಿಸಲಾಗಿದೆ. 
ಹುದ್ದೆಯ ನಿರೀಕ್ಷೆಯಲ್ಲಿದ್ದ ಮನೋಜ್ ಕುಮಾರ್ ಜೈನ್ ಅವರನ್ನು, ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯನ್ನಾಗಿ, ಖುಷ್ಬು ಸಿ. ಚೌಧರಿ ಅವರನ್ನು ನವದೆಹಲಿಯ ಕಂದಾಯ ಭವನದ ಡೆಪ್ಯುಟಿ ರೆಸಿಡೆಂಟ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದ ಪ್ರಸನ್ನ ಹೆಚ್. ಅವರನ್ನು ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ್ ಅವರನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ್ ಪಾಟೀಲ್ ಅವರನ್ನು, ಬೆಳಗಾವಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಉಡುಪಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಡಾ.ನವೀನ್ ಭಟ್ ವೈ. ಅವರನ್ನು ಕೆಎಸ್‍ಆರ್‍ಟಿಸಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕರಾಗಿದ್ದ ಟಿ. ಭೂಬಾಲನ್ ಅವರನ್ನು ಭಾಗಲಕೋಟೆ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕಲಬುರ್ಗಿ ಜಿಲ್ಲಾ ಪಂಚಾಯಿತಿ ಸಿಇಓ ಡಾ. ದಿಲೀಶ್ ಸಸಿ ಅವರನ್ನು, ಡಿಪಿಎಆರ್‍ನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಎಸ್. ಭರತ್ ಅವರನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಂಡಿಯಾಗಿ ನೇಮಕ ಮಾಡಲಾಗಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಎಂ. ಶಿಲ್ಪ ಅವರನ್ನು ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಎಂಡಿಯಾಗಿ, ನವದೆಹಲಿಯ ಕರ್ನಾಟಕ ಭವನದ ಡೆಪ್ಯೂಟಿ ರೆಸಿಡೆನ್ಸಿ ಕಮಿಷನರ್ ಆಗಿದ್ದ ಹೆಚ್. ಪ್ರಸನ್ನ ಅವರನ್ನು, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ನೇಮಕ ಮಾಡಲಾಗಿದೆ. ಕೊಳ್ಳೇಗಾಲದ ಎಸಿಯಾಗಿ ಡಾ.ಗಿರೀಶ್ ದಿಲೀಪ್ ಬಡೊಲೆ ಅವರನ್ನು ಕಲಬುರ್ಗಿ ಜಿಲ್ಲಾ ಪಂಚಾಯ್ತಿಯ ಸಿಇಓ ಆಗಿ ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News