ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಸಿ: ಟಿ.ಎಸ್.ನಾಗಾಭರಣ

Update: 2022-05-05 19:01 GMT

ಬೆಂಗಳೂರು, ಮೇ 5: ಸರಕಾರಿ ಸಂಸ್ಥೆ, ಅಧಿಕಾರಿಗಳು ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್‍ಗಳಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

ಗುರುವಾರ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಕನ್ನಡ ಅನುಷ್ಠಾನನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತದ ಎಲ್ಲ ಹಂತಗಳಲ್ಲಿಯೂ ಕನ್ನಡ ಅನುಷ್ಠಾನವಾಗಬೇಕೆನ್ನುವುದು ಸರಕಾರದ ನಿಲುವು ಎಂದರು.

ರಾಜ್ಯ ಸರಕಾರದ ಭಾಷಾನೀತಿ ಪ್ರಕಾರ ಕೆಲಸ ನಿರ್ವಹಿಸಬೇಕು. ರಾಜ್ಯ ಸರಕಾರದ ಕಚೇರಿಗಳು, ದ್ವಿಭಾಷೆ ಸೂತ್ರದನ್ವಯ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವೆಬ್‍ಸೈಟ್‍ಗಳಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಹೇಳಿದರು.

ಕನ್ನಡ ಭಾಷಾನೀತಿಯನ್ನು ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅವಕಾಶವನ್ನು ಸರಕಾರ ಪ್ರಾಧಿಕಾರಕ್ಕೆ ಕಲ್ಪಿಸಿದೆ. ಪ್ರಾಧಿಕಾರದ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಿದೆ ಎಂದು ತಿಳಿಸಿದರು.

ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಡಾ.ಬಿ.ಆರ್.ರವಿಕಾಂತೇಗೌಡ ಮಾತನಾಡಿ, ನಮ್ಮ ಕಚೇರಿಯಿಂದ ಹೊರಡಿಸುವ ಸುತ್ತೋಲೆ, ಆದೇಶಗಳು, ಅಧಿಕೃತ ಜ್ಞಾಪನ, ಅಧಿಸೂಚನೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿರುತ್ತವೆ. ಇತರೆ ಸಂಸ್ಥೆಗಳಿಂದ ಆಂಗ್ಲ ಭಾಷೆಯಲ್ಲಿ ಪತ್ರ ಕಳುಹಿಸಿದರೂ ನಮ್ಮ ಕಚೇರಿಯಿಂದ ಕನ್ನಡದಲ್ಲಿಯೇ ಉತ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಡಿ.ವಿ.ಗುರುಪ್ರಸಾದ್, ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಆಪ್ತ ಕಾರ್ಯದರ್ಶಿ ಮಹೇಶ ಎನ್. ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News