ಧ್ವನಿವರ್ಧಕ ಬಳಕೆ ನಿಯಂತ್ರಣಕ್ಕೆ ಶೀಘ್ರದಲ್ಲಿಯೇ ಹೊಸ ಸುತ್ತೋಲೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 9: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧ್ವನಿವರ್ಧಕಗಳ ಬಳಕೆ ನಿಯಂತ್ರಿಸಲು ಶೀಘ್ರದಲ್ಲಿಯೇ ಹೊಸ ಸುತ್ತೋಲೆಯೊಂದನ್ನು ಹೊರಡಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧ್ವನಿವರ್ಧಕಗಳ ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಚರ್ಚಿಸಿದರು. ಸುಪ್ರೀಂಕೋರ್ಟ್ ಆದೇಶ, ನಂತರ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶ ಹಾಗೂ 2002ರಲ್ಲಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಗಳನ್ನು ಆಧಾರವಾಗಿಟ್ಟುಕೊಂಡು ಹೊಸ ಸುತ್ತೋಲೆ ಹೊರಡಿಸುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ‘ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ನಿಯಂತ್ರಣ ಕುರಿತು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. 2002ರಲ್ಲಿ ರಾಜ್ಯ ಸರಕಾರವೂ ಒಂದು ಆದೇಶ ಹೊರಡಿಸಿತ್ತು. ಅವುಗಳನ್ನು ಅತ್ಯಂತ ಸೌಹಾರ್ದಯುತವಾಗಿ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
ಆದೇಶದ ಅನುಷ್ಠಾನಕ್ಕೆ ಡಿವೈಎಸ್‍ಪಿ ದರ್ಜೆಯ ಅಧಿಕಾರಿಗಳನ್ನು ನಿಯೋಜಿಸಬೇಕು. ವರ್ಷವಿಡೀ ಧ್ವನಿವರ್ಧಕ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಈ ಎಲ್ಲ ಅಂಶಗಳನ್ನೂ ಜಾರಿಗೆ ತರಲು ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದರು.
‘ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸುಪ್ರೀಂಕೋರ್ಟ್ ಆದೇಶದ ಅನುಷ್ಠಾನ ಆಗುತ್ತಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿ ಮಾಡಲಾಗುವುದು. ಆದೇಶವನ್ನು ಎಲ್ಲರೂ ಪಾಲಿಸಬೇಕು. ಈ ವಿಚಾರದಲ್ಲಿ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು’ ಎಂದು ಬೊಮ್ಮಾಯಿ ಹೇಳಿದರು.