ಮೇ 21, 22ಕ್ಕೆ ಪದವೀಧರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ: ಸಚಿವ ಬಿ.ಸಿ. ನಾಗೇಶ್

Update: 2022-05-10 13:16 GMT
ಸಚಿವ ಬಿ.ಸಿ. ನಾಗೇಶ್

ಬೆಂಗಳೂರು, ಮೇ 10: ರಾಜ್ಯ ರಾಜಕೀಯವನ್ನು ತಲ್ಲಣಗೊಳಿಸುತ್ತಿರುವ ಪಿಎಸ್‍ಐ ಹುದ್ದೆಗಳ ಹಗರಣದಂತೆ ಸರಕಾರಿ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸ್ವರೂಪವನ್ನು ಪಡೆದುಕೊಳ್ಳದಂತೆ ಶಿಕ್ಷಣ ಇಲಾಖೆಯು ತಯಾರಿ ನಡೆಸಿದೆ. ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿಗೆ ಮೇ 21 ಮತ್ತು 22ರಂದು ಪರೀಕ್ಷೆ ನಡೆಯಲಿದ್ದು, ತಪಾಸಣೆಯ ದೃಷ್ಟಿಯಿಂದ ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಬರುವ ಸಮಯವನ್ನು ಅರ್ಧ ಗಂಟೆಯಿಂದ ಒಂದು ಗಂಟೆಗೆ ಹೆಚ್ಚಿಸಲಾಗಿದೆ.  

ಈ ಕುರಿತು ವಿಧಾನಸೌಧದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಈ ಹಿಂದೆ ಎಲ್ಲ ಪರೀಕ್ಷೆಗಳಲ್ಲೂ ಅಭ್ಯರ್ಥಿಗಳು ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರ ಪ್ರವೇಶಿಸಬೇಕಿತ್ತು. ಪದವೀಧರ ಶಿಕ್ಷಕರ ನೇಮಕಾತಿಗಾಗಿ ನಡೆಯುವ ಪರೀಕ್ಷೆಯಲ್ಲಿ ಹೆಚ್ಚಿನ ತಪಾಸಣೆ ಇರುವುದರಿಂದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬರುವುದು ಕಡ್ಡಾಯ ಎಂದರು. 

ರಾಜ್ಯದಾದ್ಯಂತ 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 1.06 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಂಪೂರ್ಣ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದ್ದು, ನಿರಂತರವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲು ಅಧಿಕಾರಿಗಳ ತಂಡಗಳನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯವಾಗಿ ಅನ್ವಯವಾಗುವಂತೆ ಈ ಪರೀಕ್ಷೆಯಲ್ಲಿಯೂ ಮೊಬೈಲ್, ಕೈಗಡಿಯಾರ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ತರಲು ಅವಕಾಶವಿಲ್ಲ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಲೋಹಶೋಧಕ ಅಳವಡಿಸಲಾಗುವುದು ಅವರು ವಿವರಿಸಿದರು.

ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಪೊಲೀಸರು ತಪಾಸಣೆ ಮಾಡುತ್ತಾರೆ. ಪರೀಕ್ಷಾ ಕೊಠಡಿ ಪ್ರವೇಶಿಸುವಾಗ ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ತಪಾಸಣೆ ನಡೆಸಲಿದೆ. ಪರೀಕ್ಷೆ ಆರಂಭಕ್ಕೂ ಮೊದಲು ಮೂರನೇ ಹಂತದ ತಪಾಸಣೆ ನಡೆಸಲಾಗುವುದು. ನಿಗದಿತ ದಿನಾಂಕಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ವದಂತಿಗಳಿಗೆ ಯಾರು ಕಿವಿ ಕೊಡಬಾರದು ಎಂದು ಅವರು ತಿಳಿಸಿದರು.

ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಕುರಿತು ಚರ್ಚಿಸಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ತಂಡ ಎಲ್ಲ ಜಿಲ್ಲೆಗಳಲ್ಲೂ ಪರೀಕ್ಷಾ ಮೇಲುಸ್ತುವಾರಿ ವಹಿಸಲಿದೆ. ಪ್ರಶ್ನೆ ಪತ್ರಿಕೆ ರವಾನೆ, ವಿತರಣೆ ಸೇರಿದಂತೆ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳಿಗೂ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಅವರು ಹೇಳಿದರು.

ಮೇ 3ನೇ ವಾರದಲ್ಲಿ ಎಸೆಸ್ಸೆಲ್ಸಿ ಫಲಿತಾಂಶ

ಎಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಮೇ ಮೂರನೇ ವಾರದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ನಿರ್ದಿಷ್ಟ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. 

-ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News