ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಕೋರಿ ಅರ್ಜಿ: ಕೇಂದ್ರ-ರಾಜ್ಯಕ್ಕೆ ಹೈಕೋರ್ಟ್ ನೋಟಿಸ್

Update: 2022-05-12 14:01 GMT

ಬೆಂಗಳೂರು, ಮೇ 12: ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. 

ಅಂಗನವಾಡಿಗಳಿಗೆ ಮೂಲಸೌಲಭ್ಯ ಒದಗಿಸಲು ಸರಕಾರಗಳಿಗೆ ನಿರ್ದೇಶಿಸುವಂತೆ ಬೀದರ್ ಜಿಲ್ಲೆಯ ಗುರುನಾಥ ವದ್ದೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ನೋಟಿಸ್ ಜಾರಿ ಮಾಡಿದೆ. 

ರಾಜ್ಯದಲ್ಲಿರುವ ಬಡ ಮಕ್ಕಳು ಅಪೌಷ್ಟಿಕತೆಯಿಂದ ಬಳಲುವುದನ್ನು ತಡೆಗಟ್ಟಲು ಹಾಗೂ ಅಕ್ಷರಾಭ್ಯಾಸ ಮಾಡಿಸಲು ಸರಕಾರ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದೆ. ಆದರೆ, ರಾಜ್ಯದ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳೇ ಇಲ್ಲ. ಹೆಚ್ಚಿನ ಅಂಗನವಾಡಿಗಳು ಸರಿಯಾಗಿ ಗಾಳಿ-ಬೆಳಕಿಲ್ಲದ ಕಿರಿದಾದ ಕೋಣೆಗಳಲ್ಲಿ ನಡೆಯುತ್ತಿದ್ದು, ಮಕ್ಕಳು ಅಕ್ಷರಾಭ್ಯಾಸ ಮಾಡಲು, ಆಟವಾಡಲು ಸೂಕ್ತ ವಾತಾವರಣ ಇಲ್ಲ. ಮಕ್ಕಳಿಗೆ ಪೌಷ್ಟಿಕ ಆಹಾರವೂ ಲಭ್ಯವಾಗುತ್ತಿಲ್ಲ, ಶೌಚಾಲಯದ ವ್ಯವಸ್ಥೆಯೂ ಸರಿಯಿಲ್ಲ. ಹಲವೆಡೆ ವಿದ್ಯುತ್ ಸಂಪರ್ಕ ನೀಡಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿರುವ ಅವ್ಯವಸ್ಥೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತು ಬೀದರ್ ಜಿಲ್ಲಾ ಪ್ರಧಾನ ಮತ್ತು ಸತ್ತ್ರ ನ್ಯಾಯಾಧೀಶರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅರ್ಜಿದಾರರು ಅವ್ಯವಸ್ಥೆಯನ್ನು ವಿವರಿಸಿದ್ದಾರೆ.

ಅಲ್ಲದೇ, ಅಂಗನವಾಡಿ ಮಕ್ಕಳಿಗೆ ನೀಡಬೇಕಿರುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರೇ ತಮ್ಮ ಮನೆಗಳಿಗೆ ಕೊಂಡೊಯ್ಯುತ್ತಿದ್ದಾರೆ. ಪೌಷ್ಟಿಕ ಆಹಾರ ಉತ್ಪಾದನಾ ಘಟಕಗಳಲ್ಲಿ ಕಳಪೆ ಆಹಾರ ಉತ್ಪಾದಿಸಲಾಗುತ್ತಿದೆ. ಮತ್ತೊಂದೆಡೆ ಅಂಗನವಾಡಿ ಕೇಂದ್ರಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಬೇಕು. ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಬಯೋಮೆಟ್ರಿಕ್ ಮತ್ತು ಸಿಸಿಟಿವಿ ಅಳವಡಿಸಬೇಕು. ಆ ಮೂಲಕ ವ್ಯವಸ್ಥೆ ಸುಧಾರಿಸಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಿಸಬೇಕು. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಕಳೆದ ಎಪ್ರಿಲ್‍ನಲ್ಲಿ ಮನವಿ ಪತ್ರ ಸಲ್ಲಿಸಲಾಗಿದ್ದು, ಆ ಮನವಿಯನ್ನು ಪರಿಗಣಿಸಿ ಅಗತ್ಯಕ್ರಮ ಜರುಗಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News