ಭಾರೀ ಮಳೆ ಹಿನ್ನೆಲೆಯಲ್ಲಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲು ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-05-18 14:09 GMT

ಚಿಕ್ಕಮಗಳೂರು: ರಾಜ್ಯದಲ್ಲಿ ಎರಡು ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನಿಂದ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗಿದ್ದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದರಿಂದ ಸ್ವಲ್ಪಮಟ್ಟಿನ ತೊಂದರೆಯಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ತೊಂದರೆಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ತಗ್ಗು ಪ್ರದೇಶಗಳಲ್ಲಿ ಜನತೆಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಮಳೆಹಾನಿ ಪ್ರದೇಶಗಳಿಗೆ ಎನ್‍ಡಿಆರ್‍ಎಫ್, ಹೋಮ್‍ಗಾಡ್ಸ್, ಸಿವಿಲ್ ಡಿಫೆನ್ಸ್ ಎಲ್ಲರೂ ಸೇರಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಬಿಬಿಎಂಪಿಯವರು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆ ಆರಂಭವಾಗಿದೆ. ರಸಗೊಬ್ಬರ ದಾಸ್ತಾನು ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ್ದೇನೆ. ಅಧಿಕಾರಿಗಳ ಸಭೆ ನಡೆಸಿದ್ದೇನೆ. ಕೃಷಿ ಸಚಿವರಿಗೆ ಸೂಚನೆಯನ್ನೂ ನೀಡಿದ್ದೇನೆ ಎಂದರು.

ರಾಜ್ಯದಲ್ಲಿ ಡಿಎಪಿ ಗೊಬ್ಬರಕ್ಕೆ ಬೇಡಿಕೆ ಜಾಸ್ತಿ ಇದ್ದು, ಗೊಬ್ಬರ ಪೂರೈಕೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೇಂದ್ರ ಸರಕಾರ ರಸಗೊಬ್ಬರ ವಿಚಾರದಲ್ಲಿ ಕೋಟಾ ನಿಗಧಿಪಡಿಸಿದ್ದು, ಸಮಯಕ್ಕೆ ಸರಿಯಾಗಿ ಗೊಬ್ಬರ ರೈತರಿಗೆ ಮುಟ್ಟುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಚಿಕ್ಕಮಗಳೂರು ಜಿಲ್ಲಾ ಭೇಟಿ ಕಾರ್ಯಕ್ರಮ ಅನೇಕ ಬಾರಿ ನಿಗದಿಯಾಗಿದ್ದರೂ ಕಾರಣಾಂತರಗಳಿಂದ ಬರಲು ಸಾಧ್ಯವಾಗಿರಲಿಲ್ಲ. ಮಳೆ ಇದ್ದರೂ ಚಿಕ್ಕಮಗಳೂರಿಗೆ ಬಂದಿದ್ಧೇನೆ. ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದೇನೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಆಧ್ಯತೆ ನೀಡುತ್ತೇನೆ ಎಂದು ತಿಳಿಸಿದರು.

ಮೂಡಿಗೆರೆ ನೆರೆ ಸಂತ್ರಸ್ಥರ ಸಮಸ್ಯೆಗಳನ್ನು ವಿಶೇಷವಾಗಿ ಗಮನಹರಿಸಿ ಅವರ ಸಮಸ್ಯೆ ಗಳನ್ನು ಪರಿಹರಿಸುತ್ತೇನೆ. ಬೆಳಗಾವಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇದೇ ರೀತಿಯ ಸಮಸ್ಯೆಯಾಗಿತ್ತು. ಮತ್ತೊಮ್ಮೆ ಪನರ್ ಪರಿಶೀಲನೆ ನಡೆಸಿ ನೈಜ ಸಂತ್ರಸ್ಥರಿಗೆ ಪರಿಹಾರ ಕೊಡುತ್ತೇವೆ ಎಂದ ಅವರು, ದಾವೊಸ್‍ಗೆ ಪ್ರವಾಸಕ್ಕೆ ಹೋಗಿ ಬಂದ ಬಳಿಕ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News