ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಪಂ ಪಾತ್ರ ಮಹತ್ವದ್ದು: ಡಾ. ಕುಮಾರ್

Update: 2022-05-18 17:02 GMT

ಮಂಗಳೂರು : ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಪಂಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಪಂ ಸಿಇಒ ಡಾ.ಕುಮಾರ್ ಅಭಿಪ್ರಾಯಪಟ್ಟರು.

ನಗರದ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಮಂಗಳೂರು ಮತ್ತು ಮೂಡುಬಿದಿರೆ ತಾಲೂಕುಗಳ ಗ್ರಾಪಂಗಳ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಪಂಚಾಯತ್‌ ರಾಜ್ ವ್ಯವಸ್ಥೆ ಮತ್ತು ಗ್ರಾಮಗಳ ಏಳಿಗೆಗೆ ಸರಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಹಾಗೂ ಸಿಬ್ಬಂದಿಯು ಗ್ರಾಪಂಗಳಲ್ಲಿ ಸೇವೆ ಮಾಡುವುದು ಭಾಗ್ಯ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು, ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ,  ಆ ಮೂಲಕ ಗ್ರಾಮಗಳ ಅಭಿವೃದ್ಧಿ ವಿಫುಲ ಅವಕಾಶಗಳಿದ್ದು, ಸಮರ್ಥವಾಗಿ ಬಳಸಿಕೊಳ್ಳಬೇಕು, ಗ್ರಾಮದಲ್ಲಿ ಎಲ್ಲಾ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ಇರಬೇಕು, ಇಲ್ಲದಿದ್ದರೆ ಅಂತಹ ಮನೆಗಳಿಗೆ ಖುದ್ದು ಅಧ್ಯಕ್ಷರೇ ಭೇಟಿ ನೀಡಿ ಅವರಿಗೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ಯತ್ನಿಸಬೇಕು. ಗ್ರಾಮಗಳಲ್ಲಿರುವ ವಸತಿ ರಹಿತರಿಗೆ ನಿವೇಶನ ಒದಗಿಸುವ ವಿವಿಧ ಯೋಜನೆಯಡಿ ಅರ್ಹರಿಗೆ ನಿವೇಶನ ಒದಗಿಸಿ ಕೊಡುವಂತೆ ಡಾ.ಕುಮಾರ್ ಸೂಚಿಸಿದರು.

ಕಳೆದ ಬಾರಿ ಮಂಜನಾಡಿ, ಕೋಣಾಜೆ, ಬಾಳೆಪುಣಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಈ ಬಾರಿ ಅಂತಹ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಮಂಗಳೂರು ಮತ್ತು ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಗ್ರಾಪಂ ಅಧ್ಯಕ್ಷರು, ಪಿಡಿಒ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News