ಕಾರ್ಕಳ ಸರಕಾರಿ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕ ಉದ್ಘಾಟನೆ

Update: 2022-05-22 12:35 GMT

ಕಾರ್ಕಳ : ಕಾರ್ಕಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅದಾನಿ ಫೌಂಡೇಶನ್ ಸಿಎಸ್‌ಆರ್ ಅನುದಾನದಡಿ ೭೮.೧೮ ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ೧೦ ಬೆಡ್‌ಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರವಿವಾರ ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕಾರ್ಕಳ ಸರಕಾರಿ ಆಸ್ಪತ್ರೆಯು ಎಲ್ಲಾ ಸೌಲಭ್ಯವುಳ್ಳ ಒಂದು ಸುಸಜ್ಜಿತ ಆಸ್ಪತ್ರೆಯಾಗಿ ಮಾರ್ಪಟಿದ್ದು ಸೌಲಭ್ಯದ ವಿಷಯದಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಿಂತ ಕಡಿಮೆಯಿಲ್ಲ ಎಂದು ತಿಳಿಸಿದರು.

ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಸಿಎಸ್‌ಆರ್ ಕಾರ್ಯಕ್ರಮಗಳಲ್ಲಿ ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಿಗೆ ವಿಶೇಷ ಒತ್ತು ನೀಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು ನಿಭಾಯಿಸಲು ಅದಾನಿ ೌಂಡೇಶನ್ ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಟ್ಟು ೧.೧೮ ಕೋಟಿ ರೂ. ಅನುದಾನ ವನ್ನು ನೀಡಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಿಶೋರ್ ಆಳ್ವ, ದಾನಿ ಬೋಳ ಆಗ್ರೋ ಸಂಸ್ಥೆಯ ದಾಮೋದರ್‌ಕಾಮತ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಆಡಳಿತ ವೈದ್ಯಾಧಿಕಾರಿ ಡಾ.ಕೆ.ಸುಬ್ರಹ್ಮಣ್ಯ ರಾವ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News