ಹೈಕೋರ್ಟ್‍ನ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ: ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್

Update: 2022-05-22 15:34 GMT

ಬೆಂಗಳೂರು, ಮೇ 22: ಹಿಜಾಬ್ ಪ್ರಕರಣದಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಸಭೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಗೆ ನಗರದ ಸೆಷನ್ಸ್ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ. 

ಪ್ರಕರಣದಲ್ಲಿ ಬಂಧಿತನಾಗಿರುವ ತಮಿಳುನಾಡಿದ ತೌಹೀದ್ ಜಮಾತ್ ಟಿಎನ್‍ಟಿಜೆ) ಸಂಘಟನೆ ಮುಖ್ಯಸ್ಥ ರಹಮತ್-ಉಲ್ಲಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 67ನೆ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಈ ಆದೇಶ ಮಾಡಿದೆ.

ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದು ಗಂಭೀರ ಸ್ವರೂಪದ ಅಪರಾಧವಾಗಿದೆ. ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಹಲವು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದಿಟ್ಟಿದೆ. ಈ ಹಂತದಲ್ಲಿ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟು ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.

ಪ್ರಕರಣದಲ್ಲಿ ಸರಕಾರದ ಪರ ಬಿ.ಎಸ್.ಪಾಟೀಲ್ ವಾದ ಮಂಡಿಸಿದ್ದರು. ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಸರಕಾರ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಕೋರಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠ, ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು ಎಂದು ತೀರ್ಪು ನೀಡಿತ್ತು.

ಈ ತೀರ್ಪು ನೀಡಿದ್ದ ಮೂವರು ನ್ಯಾಯಮೂರ್ತಿಗಳಿಗೆ ಟಿಎನ್‍ಟಿಜೆ ಮುಸ್ಲಿಂ ಸಂಘಟನೆ ಮುಖಂಡ ಆರ್. ರಹಮತ್-ಉಲ್ಲಾ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದ ಬಹಿರಂಗ ಸಮಾವೇಶದಲ್ಲಿ ಕೊಲೆ ಬೆದರಿಕೆ ಹಾಕಿದ್ದ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ತಮಿಳುನಾಡು ಹಾಗೂ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದ್ದು, ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News