PSI ನೇಮಕಾತಿಯಲ್ಲಿ ಹಗರಣ: ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದು
ಬೆಂಗಳೂರು, ಮೇ 23: ಪಿಎಸ್ಸೈ ನೇಮಕಾತಿ ಅಕ್ರಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಗರದ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ವಿಚಾರಣೆ ನಡೆಸಿದ 52ನೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಸರಕಾರದ ಪರ ವಾದಿಸಿದ ವಕೀಲರು, ಅರ್ಜಿದಾರರ ಆರೋಪಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸುವುದಕ್ಕಾಗಿ ಪ್ರಭಾವಿ ಅಧಿಕಾರಿಗಳೊಂದಿಗೆ ಶಾಮೀಲಾಗಿದ್ದಾರೆ. ಹೀಗಾಗಿ, ಜಾಮೀನು ಅರ್ಜಿ ವಜಾಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ನಾಳೆ ಅರ್ಜಿ ವಿಚಾರಣೆ: ಪಿಎಸ್ಸೈ ನೇಮಕಾತಿ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ, ಹೈಕೋರ್ಟ್‍ನಲ್ಲಿ ರಿರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಮೇ 25ರಂದು ವಿಚಾರಣೆಗೆ ಬರಲಿದೆ.