​ಸ್ವ-ಉದ್ಯೋಗದಿಂದ ನಿರುದ್ಯೋಗ ನಿವಾರಣೆ: ಸಚಿವ ಎಸ್. ಅಂಗಾರ

Update: 2022-05-23 15:08 GMT

ಉಡುಪಿ, ಮೇ 23: ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ಸ್ವ-ಉದ್ಯೋಗದ ಅವಶ್ಯಕತೆ ಇದೆ. ಜನರು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾದಲ್ಲಿ ದೇಶದ ಆರ್ಥಿಕತೆ ಕೂಡ ಯಶಸ್ಸನ್ನು ಕಾಣ ಬಹುದು ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದ್ದಾರೆ.

ಮಣಿಪಾಲದ ಅಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇಲಾಖೆ ಇವರ ಸಹಯೋಗದಲ್ಲಿ ನಡೆದ ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀ-ಶಕ್ತಿ ಗುಂಪುಗಳಿಗೆ ಬೀಜಧನ ಚೆಕ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಮತ್ತು ರಾಜ್ಯ ಸರಕಾರಗಳು ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಸ್ತ್ರೀ ಶಕ್ತಿ ಗುಂಪುಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಣ್ಣ ಉದ್ದಿಮೆಗಳನ್ನು ಆರಂಭಿಸಲು ಸರಕಾರದಿಂದ ಸಹಾಯಧನದೊರಕುತ್ತಿದೆ. ಫಲಾನುಭವಿಗಳು ಇದರ ಸಂಪೂರ್ಣ ಪ್ರಯೋಜನ ವನ್ನು ಪಡೆದುಕೊಳ್ಳಬೇಕು ಎಂದರು.

ಕರಾವಳಿಯಲ್ಲಿ ಒಳನಾಡು ಮೀನುಗಾರಿಕೆ ಹೆಚ್ಚು ಆದಾಯವನ್ನು ಉತ್ಪಾದಿ ಸುವ ಕ್ಷೇತ್ರವಾಗಿದ್ದು, ಇದಕ್ಕೆ ಸರಕಾರ ಕೂಡ ಪ್ರೋತ್ಸಾಹ ನೀಡುತ್ತಿದೆ. ಮೀನಿನ ಗುಣಮಟ್ಟ ಕಾಪಾಡಲು ಕೋಲ್ಡ್ ಸ್ಟೋರೆಜ್ ವ್ಯವಸ್ಥೆ, ಮೀನು ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಹಾಗೂ ಶಿಥಲೀಕರಣ ವಾಹನ ವ್ಯವಸ್ಥೆಯನ್ನು ಸರಕಾರ ಮಾಡುತ್ತಿದ್ದು, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ ಅನೇಕ ರೀತಿಯ ಸಹಾಯವನ್ನು ಸರಕಾರ ಮಾಡುತ್ತಿದೆ ಎಂದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭಾಗವಹಿಸಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಪಂನ ಯೋಜನಾ ನಿರ್ದೇಶಕ ಬಾಬು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಮಹಿಳಾ ಅಭಿವೃದ್ಧಿ ನಿಗಮ ಅಧಿಕಾರಿ ಚಂದ್ರಿಕ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿಗೆ ದಾಖಲಾದ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಸೃಷ್ಟಿ ಹಾಗೂ ಕ್ಷೀರ ಭಾಗ್ಯ ಯೋಜನೆಯಡಿಯಲ್ಲಿ ಹಾಲು ಮತ್ತು ಮೊಟ್ಟೆಯನ್ನು, ಅಲ್ಲದೇ ಬೈಂದೂರು ತಾಲೂಕಿನ 21, ಕುಂದಾಪುರ ತಾಲೂಕಿನ 6, ಉಡುಪಿಯ 1 ಮತ್ತು ಕಾಪುವಿನ 24 ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ಒಂದು ಲಕ್ಷ ರೂ. ಮೊತ್ತದ ಬೀಜಧನದ ಚೆಕ್ ಅನ್ನು ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News