×
Ad

ಜಿ.ಪಂ-ತಾ.ಪಂ ಚುನಾವಣೆ: ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿಗೆ 12 ವಾರಗಳ ಗಡುವು ವಿಧಿಸಿದ ಹೈಕೋರ್ಟ್

Update: 2022-05-24 19:18 IST

ಬೆಂಗಳೂರು, ಮೇ 24: ರಾಜ್ಯದ ಜಿ.ಪಂ ಹಾಗೂ ತಾ.ಪಂ ಕ್ಷೇತ್ರ ಪುನರ್‍ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿದ್ದು ಹೆಚ್ಚಿನ ಕಾಲಾವಕಾಶ ಕೇಳದಂತೆ ರಾಜ್ಯ ಸರಕಾರಕ್ಕೆ ತಾಕೀತು ಮಾಡಿದೆ.

ಜಿ.ಪಂ, ತಾ.ಪಂ ಕ್ಷೇತ್ರ, ಮೀಸಲಾತಿ ನಿಗದಿಗೆ ರಾಜ್ಯ ಸರಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ಚುನಾವಣೆ ನಡೆಸಲು ವಿಳಂಬವಾಗುತ್ತಿದೆ ಎಂದು ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಮಂಗಳವಾರ ಈ ನಿರ್ದೇಶನ ನೀಡಿದೆ. 

ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು ವಾದಿಸಿ, ನಿವೃತ್ತ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಮೀಸಲು ನಿಗದಿಗೆ ಆಯೋಗ ರಚಿಸಲಾಗಿದೆ ಅದರ ವರದಿಗಾಗಿ ಕಾಲಾವಕಾಶ ನೀಡಬೇಕೆಂದು ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು, ರಾಜ್ಯ ಸರಕಾರ ಪದೇ ಪದೇ ಹೆಚ್ಚಿನ ಸಮಯ ಕೇಳಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ 12 ವಾರಗಳ ಗಡುವು ವಿಧಿಸಿ ವಿಚಾರಣೆ ಮುಂದೂಡಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದೆ ಎಂದು ಅಯೋಗವು ಕಳೆದ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಿತ್ತು. 

ಕಳೆದ ವರ್ಷ ಎಪ್ರಿಲ್, ಮೇ ಮತ್ತು ಜೂನ್‍ನಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‍ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು.

ಚುನಾವಣೆಗೆ ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ಸರಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News