ತೃತೀಯ ರಂಗ ಬಲವರ್ಧನೆಗೆ ಯತ್ನ: ತೆಲಂಗಾಣ ಸಿಎಂ ಚಂದ್ರಶೇಖರರಾವ್- ಮಾಜಿ ಪ್ರಧಾನಿ ದೇವೇಗೌಡ ಭೇಟಿ

Update: 2022-05-26 11:26 GMT

ಬೆಂಗಳೂರು, ಮೇ 26: ದೇಶದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಹೊರತುಪಡಿಸಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ತೃತೀಯ ರಂಗವನ್ನು ಬಲವರ್ಧನೆಗೊಳಿಸಲು ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಪ್ರಯತ್ನಿಸುತ್ತಿದ್ದಾರೆ.

ಇದರ ಭಾಗವಾಗಿ ಗುರುವಾರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಚಂದ್ರಶೇಖರರಾವ್, ತೃತೀಯ ರಂಗ ಸ್ಥಾಪನೆ ರಾಷ್ಟ್ರಪತಿ ಚುನಾವಣೆ, ಪಸಕ್ತ ರಾಜಕೀಯ ವಿದ್ಯಾಮಾನಗಳು ಹಾಗೂ ಮುಂಬರುವ ಲೋಕಸಭಾ ಚುನಾವಣೆಯನ್ನು ಯಾವ ರೀತಿ ಎದುರಿಸಬೇಕು ಎಂಬುದು ಸೇರಿದಂತೆ ಇನ್ನಿತರ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಕೆ.ಸಿ.ಚಂದ್ರಶೇಖರರಾವ್, ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ತೃತೀಯ ರಂಗವನ್ನು ಬಲಪಡಿಸಲು ಪ್ರಯತ್ನಿಸಿದ್ದರು. ಆದರೆ, ಅವರ ಪ್ರಯತ್ನ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಇದೀಗ, ಲೋಕಸಭಾ ಚುನಾವಣೆಗೆ ಇನ್ನೆರಡು ವರ್ಷಗಳು ಇರುವಾಗ, ಈಗಿನಿಂದಲೆ ಮತ್ತೊಂದು ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ.

ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರವು ಪ್ರಾದೇಶಿಕ ಅಸ್ಮಿತೆಯನ್ನು ಕಡೆಗಣಿಸುವ ಮೂಲಕ ಏಕಸ್ವಾಮ್ಯತೆ ಸಾಧಿಸಲು ಯತ್ನಿಸುತ್ತಿದೆ ಎಂದು ಈಗಾಗಲೆ ಹಲವಾರು ಪ್ರಾದೇಶಿಕ ಪಕ್ಷಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ತೃತೀಯ ರಂಗವನ್ನು ಬಲಪಡಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಪಾಠ ಕಲಿಸಬಹುದು ಎಂಬುದು ಚಂದ್ರಶೇಖರರಾವ್ ಲೆಕ್ಕಾಚಾರವಾಗಿದೆ.

ಈಗಾಗಲೆ, ಚಂದ್ರಶೇಖರರಾವ್ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತೃಣಮೂಲ ಕಾಂಗ್ರೆಸ್ ವರಿಷ್ಠೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆರ್‍ಜೆಡಿ ಮುಖ್ಯಸ್ಥ ತೇಜಸ್ವಿಯಾದವ್ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆಗಳನ್ನು ನಡೆಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಭೇಟಿ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಒಂದಾಗುವ ನಿಟ್ಟಿನಲ್ಲಿ ಈಗಾಗಲೆ ಚರ್ಚೆಗಳು ಪ್ರಾರಂಭವಾಗಿವೆ. ವಿವಿಧ ರಾಜ್ಯಗಳಲ್ಲಿರುವ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳು ಒಂದಾಗಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾಯವಾಗಿ ತೃತೀಯ ರಂಗ ಸ್ಥಾಪನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ಈ ಭೇಟಿ ನಡೆದಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News