ಜೂ. 1: ಮೂಡುಬಿದಿರೆಯಲ್ಲಿ ಮುಖ್ಯಮಂತ್ರಿ ಸಂವಾದ

Update: 2022-05-29 09:56 GMT

ಮಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜೂ.೧ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿ ನಲ್ಲಿ ರೈತ ವಿದ್ಯಾನಿಧಿ ಯೋಜನೆಯ ಸದುಪಯೋಗ ಪಡೆದಿರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಭಾ ವೇದಿಕೆಗೆ ಫಲಾನುಭವಿಗಳನ್ನು ಕರೆ ತರಲು ಹಾಗೂ ವಾಪಸ್ ಕಳುಹಿಸಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ನಿರ್ದೇಶನ ನೀಡಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಪಂ ಸಿಇಒ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ರವಿವಾರ ನಡೆಸಿದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಫಲಾನುಭವಿ ವಿದ್ಯಾರ್ಥಿಗಳನ್ನು ಕರೆ ತರಲು ಬಸ್‌ಗಳ ವ್ಯವಸ್ಥೆ ಮಾಡಿಕೊಳ್ಳ ಬೇಕು. ಸಂಬಂಧಿಸಿದ ಕಾಲೇಜುಗಳಲ್ಲಿ ಬಸ್‌ಗಳು ಇಲ್ಲದಿದ್ದಲ್ಲಿ ಸ್ಥಳೀಯ ಶಾಸಕರೊಂದಿಗೆ ಸಮನ್ವಯ ಸಾಧಿಸಿದರೆ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡಲಿದ್ದಾರೆ. ವಿದ್ಯಾರ್ಥಿಗಳನ್ನು ಕರೆ ತರುವ ಹಾಗೂ ಅವರನ್ನು ಕಳುಹಿಸಿ ಕೊಡಲು ವ್ಯವಸ್ಥಿತವಾಗಿ ನಿರ್ವಹಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸುವಂತೆ ತಿಳಿಸಿದ ಸಚಿವರು, ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಅನುಭವಿ ಉಪನ್ಯಾಸಕರಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗ ಆಯೋಜಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಪಂ  ಸಿಇಒ ಡಾ. ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಎಂಡಿ ಪ್ರಶಾಂತ್ ಕುಮಾರ್ ಮಿಶ್ರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಸಹಿತ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News