ರಾಜ್ಯಸಭೆಗೆ ಸ್ಪರ್ಧಿಸಿರುವ ಬಿಜೆಪಿಯ ಮೂವರು ಅಭ್ಯರ್ಥಿಗಳ ಆಯ್ಕೆ ನಿಶ್ಚಿತ: ಅರುಣ್ ಸಿಂಗ್

Update: 2022-06-05 14:31 GMT

ಬೆಂಗಳೂರು, ಜೂ. 5: ‘ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಬಿಜೆಪಿಯ ಮೂವರು ಅಭ್ಯರ್ಥಿಗಳು ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದ್ದಾರೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿದೆ. ಕೇಂದ್ರದ ಬಿಜೆಪಿ ಸರಕಾರ ಮತ್ತು ಬಸವರಾಜ ಬೊಮ್ಮಾಯಿ ಅವರ ಸರಕಾರ ಮಾಡಿದ ಉತ್ತಮ ಕಾರ್ಯಗಳನ್ನು ಗಮನದಲ್ಲಿಟ್ಟು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ' ಎಂದು ನುಡಿದರು.

‘ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರ 8 ವರ್ಷಗಳನ್ನು ಪೂರೈಸಿದೆ. ಬಡವರು, ರೈತರು, ಶೋಷಿತರು ಮತ್ತು ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ. ಬಿಜೆಪಿ ವತಿಯಿಂದ 15 ದಿನಗಳ ಕಾಲ ಮೋದಿಯವರ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ' ಎಂದು ಅವರು ವಿವರಿಸಿದರು.

‘ಪ್ರತಿ ಗ್ರಾಮದ ಪ್ರತಿಯೊಂದು ಮನೆಯನ್ನು ಸಂಪರ್ಕಿಸಿ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರದ ಸಾಧನೆಗಳು ಮತ್ತು ಯೋಜನೆಗಳ ಕುರಿತು ಜನರಿಗೆ ಮಾಹಿತಿ ಕೊಡಲಾಗುತ್ತದೆ ಎಂದು ಅರುಣ್ ಸಿಂಗ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News