ಮೊದಲ ಟ್ವೆಂಟಿ-20: ಭಾರತ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ

Update: 2022-06-09 17:16 GMT
ಡೇವಿಡ್ ಮಿಲ್ಲರ್, Photo:twitter

 ಹೊಸದಿಲ್ಲಿ, ಜೂ.9: ರಸೀ ವಾನ್‌ಡರ್ ಡುಸೆನ್ (ಔಟಾಗದೆ 75 ರನ್, 46 ಎಸೆತ, 7 ಬೌಂಡರಿ, 5 ಸಿಕ್ಸರ್)ಹಾಗೂ ಡೇವಿಡ್ ಮಿಲ್ಲರ್(ಔಟಾಗದೆ 64 ರನ್, 31 ಎಸೆತ, 4 ಬೌಂಡರಿ, 5 ಸಿಕ್ಸರ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧದ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನು 7 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಗುರುವಾರ ಗೆಲ್ಲಲು 212 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 81 ರನ್‌ಗೆ 3 ವಿಕೆಟ್ ಕಳೆದುಕೊಂಡಿತು. ಆಗ ಜೊತೆಯಾದ ಡುಸೆನ್ ಹಾಗೂ ಮಿಲ್ಲರ್ 4ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 131 ರನ್ ಸೇರಿಸಿ ಇನ್ನೂ 5 ಎಸೆತಗಳು ಬಾಕಿ ಇರುವಾಗಲೇ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ (76 ರನ್, 48 ಎಸೆತ, 11 ಬೌಂಡರಿ, 3 ಸಿಕ್ಸರ್)ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿತು. ಇದರೊಂದಿಗೆ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ಸ್ಕೋರ್ ಗಳಿಸಿತು. ದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತವು ಗರಿಷ್ಠ ಮೊತ್ತ ಕಲೆ ಹಾಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News