ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಚುನಾವಣೆ; ಮತದಾನ ಆರಂಭ
ಬೆಂಗಳೂರು, ಜೂ. 13: ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ವಿಧಾನ ಪರಿಷತ್ತಿನ 2 ಪದವೀಧರರ ಮತ್ತು 2 ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಬೆಳಗ್ಗೆ 8 ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ವಾಯುವ್ಯ ಪದವೀಧರರ, ವಾಯುವ್ಯ ಶಿಕ್ಷಕರ, ದಕ್ಷಿಣ ಪದವೀಧರರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಜು.15ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಕಾಂಗ್ರೆಸ್‍ನ ಪ್ರಕಾಶ್ ಹುಕ್ಕೇರಿ ಸೇರಿದಂತೆ ಇನ್ನಿತರರ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.
ತೀವ್ರ ಜಿದ್ದಾಜಿದ್ದಿನ ಹಿನ್ನೆಲೆಯಲ್ಲಿ ಶಾಂತಿಯುತ ಹಾಗೂ ಮುಕ್ತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಈಗಾಗಲೇ ಮತಗಟ್ಟೆ ಸಾಮಗ್ರಿಗಳೊಂದಿಗೆ ಕರ್ತವ್ಯಕ್ಕೆ ತೆರಳಿದ್ದಾರೆ. ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆ ಬಿದ್ದಿದ್ದು, ಘಟಾನುಘಟಿ ಅಭ್ಯರ್ಥಿಗಳು, ‘ಶಿಕ್ಷಕಿತ' ಮತದಾರರನ್ನು ಸೆಳೆಯಲು ಕೊನೆಯ ಕ್ಷಣದ ಕಸರತ್ತು ನಡೆಸಿದ್ದಾರೆ.
ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕಾ, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಂ.ವಿ ರವಿಶಂಕರ್, ಕಾಂಗ್ರೆಸ್‍ನ ಜಿ.ಎಂ.ಮಧು, ಜೆಡಿಎಸ್‍ನ ಎಚ್.ಕೆ.ರಾಮು, ಕನ್ನಡ ಚಳವಳಿ ಪಕ್ಷದಿಂದ ವಾಟಾಳ್ ನಾಗರಾಜ್ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಬಸವರಾಜ ಹೊರಟ್ಟಿ, ಜೆಡಿಎಸ್‍ನಿಂದ ಶ್ರೀಶೈಲ ಘಡದಿಮ್ಮಿ ಹಾಗೂ ಕಾಂಗ್ರೆಸ್ ಬಸವರಾಜ ಗುರಿಕಾರ ಅಖಾಡದಲ್ಲಿದ್ದರೆ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅರುಣ್ ಶಹಾಪುರ, ಕಾಂಗ್ರೆಸ್‍ನಿಂದ ಪ್ರಕಾಶ್ ಹುಕ್ಕೇರಿ, ಜೆಡಿಎಸ್‍ನಿಂದ ಚಂದ್ರಶೇಖರ್ ಲೋಣಿ ಸ್ಪರ್ಧಿಸಿದ್ದು, ಗೆಲುವಿನ ವಿಜಯಮಾಲೆ ಯಾರಿಗೆ ದಕ್ಕಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.