ಚೆನ್ನೈ: ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ ಸಾವು, 2 ತಿಂಗಳಲ್ಲಿ 2ನೇ ಪ್ರಕರಣ
ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ರವಿವಾರ ಸಂಜೆ 30 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದು, ಎರಡು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ ಎಂದು NDTV ವರದಿ ಮಾಡಿದೆ.
ಶನಿವಾರ ಕೊಡಂಗಯ್ಯೂರು ಪೊಲೀಸರು ರಾಜಶೇಖರ್ ನನ್ನು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ 20ಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳಿದ್ದವು ಎಂದು ಆರೋಪಿಸಲಾಗಿದೆ.
ತಿರುವಳ್ಳೂರು ಜಿಲ್ಲೆಯ ನಿವಾಸಿ ರಾಜಶೇಖರ್ ಎಂಬಾತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
"ನಾವು ರಾಜಶೇಖರ್ ನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದೇವೆ. ಅಲ್ಲಿ ಆತ ಚಿಕಿತ್ಸೆಯ ನಂತರ ಚೆನ್ನಾಗಿದ್ದ. ನಂತರ ನಾವು ಆತನನ್ನು ಮತ್ತೆ ಪೊಲೀಸ್ ಠಾಣೆಗೆ ಕರೆತಂದಿದ್ದೇವೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ, ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಸರಕಾರಿ ಸ್ಟಾನ್ಲಿ ಆಸ್ಪತ್ರೆಯಲ್ಲಿ ‘’ಮೃತಪಟ್ಟಿದ್ದಾನೆ" ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಚೆನ್ನೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ. ಎಸ್. ಅನ್ಬು ತಿಳಿಸಿದ್ದಾರೆ.
ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಸೈಲೇಂದ್ರ ಬಾಬು ಅವರು ರಾಜಶೇಖರ್ ಸಾವಿನ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಬಿ-ಸಿಐಡಿ) ಆದೇಶಿಸಿದ್ದಾರೆ.